ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರ ಹಣ ತಲುಪಲಿದೆ: ಸಚಿವ ಕೃಷ್ಣ ಭೈರೇಗೌಡ
ರಾಯಚೂರು: ರಾಜ್ಯ ಕಾಂಗ್ರೆಸ್ ಸರಕಾರ ಒಂದು ವಾರದೊಳಗೆ ರಾಜ್ಯದ 25 ಲಕ್ಷ ರೈತರಿಗೆ ನೇರವಾಗಿ ಪರಿಹಾರ ಹಣ ತಲುಪಿಸಲಿದ್ದು, ಇದಕ್ಕಾಗಿ ‘ಫ್ರೂಟ್ಸ್’ ತಂತ್ರಾಂಶ ಬಳಕೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಮಂಗಳವಾರ ರಾಯಚೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷ ಪರಿಹಾರದ ಹಣವನ್ನು ‘ಫ್ರೂಟ್ಸ್’ ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರಕಾರ ನಿರ್ಧರಿಸಿದೆ ಎಂದರು.
ಸರಕಾರ ಈ ಹಿಂದೆ ರೈತರ ಬರ ಪರಿಹಾರ ಹಣವನ್ನು ಅಧಿಕಾರಿಗಳ ಮೂಲಕ ತಲುಪಿಸುತ್ತಿತ್ತು. ಆದರೆ, ಈ ವೇಳೆ ಸಾಕಷ್ಟು ಹಣ ದುರ್ಬಳಕೆ ಪ್ರಕರಣಗಳೂ ಕಂಡು ಬರುತ್ತಿತ್ತು. ಪರಿಹಾರದ ಹಣವೂ ಸಿಗದೆ ರೈತರು ಪರಿತಪಿಸುವ ಸ್ಥಿತಿ ಇತ್ತು. ಹೀಗಾಗಿ ಈ ಎಲ್ಲಾ ಅಕ್ರಮಗಳಿಗೆ ತಡೆಯೊಡ್ಡುವ ಸಲುವಾಗಿ “ಫ್ರೂಟ್ಸ್” ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಇದೀಗ ರಾಜ್ಯಾದ್ಯಂತ ಎಲ್ಲಾ ರೈತರ ಒಟ್ಟು ಜಮೀನಿನ ವಿಸ್ತೀರ್ಣ ಹಾಗೂ ಬೆಳೆ ಹಾನಿ ಕುರಿತ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಮೊದಲ ಕಂತಿನ ಪರಿಹಾರವನ್ನು ಯಾವುದೇ ತಾಂತ್ರಿಕ ದೋಷವಿಲ್ಲದೆ, ಹಣ ದುರುಪಯೋಗವಾಗದೆ ನೇರವಾಗಿ ರೈತರಿಗೆ ತಲುಪಿಸಲು ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇನ್ನೂ ಒಂದು ವಾರದೊಳಗೆ ರಾಜ್ಯದ 25 ಲಕ್ಷ ರೈತರು ಪರಿಹಾರ ಹಣ ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಇನ್ನೂ, ರೈತರ ಆರ್ ಟಿಸಿ ಜೊತೆಗೆ ಆಧಾರ್ ಲಿಂಕ್ ಜೋಡಣೆ ನಮ್ಮ ಮುಂದಿನ ಆದ್ಯತೆಯಾಗಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಬೇಕು. ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ಎಸ್‍ಡಿಆರ್ ಎಫ್ ಹಣವನ್ನು ಬಳಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಜನವರಿ, ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಜಾನುವಾರುಗಳಿಗೆ ಮೇವಿನ ಪೂರೈಕೆಗೆ ಅನುಕೂಲವಾಗುವಂತೆ ರಾಜ್ಯಾದ್ಯಂತ 7,63,000 ಮೇವಿನ ಬೀಜದ ಕಿಟ್‍ಗಳನ್ನು ವಿತರಿಸಲಾಗಿದೆ. ರಾಯಚೂರಿನಲ್ಲಿ 2846 ರೈತರಿಗೆ 12680 ಮೇವಿನ ಕಿಟ್‍ಗಳನ್ನು ನೀಡಲಾಗಿದೆ. ಈ ಕಿಟ್‍ಗಳನ್ನು ಗ್ರಾಮಪಂಚಾಯತಿ ಮಟ್ಟದಲ್ಲಿ ಪಾರದರ್ಶಕವಾಗಿ ವಿತರಿಸಬೇಕು. ಈ ಕೆಲಸಕ್ಕೆ ಹಾಲು ಉತ್ಪಾಕರ ಸಹಕಾರ ಸಂಘದ ಸಹಾಯ ಪಡೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು
ಶೀಘ್ರ ಘೋಷಣೆ: ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದರು ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವುಮಾಡಿಕೊಡಲಾಗಿತ್ತು.
ರಾಯಚೂರು ಜಿಲ್ಲೆಯಲ್ಲಿ ಒಟ್ಟು 87 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈವರೆಗೆ 34 ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. 43 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರದಲ್ಲಿ ಎಲ್ಲಾ ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳು ಎಂದು ಘೋಷಿಸಿ. ಮತ್ತಷ್ಟು ಅರ್ಹ ಗ್ರಾಮಗಳಿದ್ದರೆ, ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ ಸಲ್ಲಿಸಿ ಬಡವರ ಪರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.