ದೇವದುರ್ಗದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

ರಾಯಚೂರು : ಮಕ್ಕಳು ಪ್ರತಿನಿತ್ಯ ಶಾಲೆಗೆ ಬಂದು ಜ್ಞಾನಾರ್ಜನೆ ಪಡೆಯಬೇಕು. ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ಮಗುವಿನ ಹಕ್ಕಾಗಿದೆ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಢಾಧಿಕಾರಿಗಳು, ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ರಫೀಕ್ ಅಹ್ಮದ್ ಅವರು ಹೇಳಿದರು.
ಮಾ.12ರ ಬುಧವಾರ ದಂದು ಜಿಲ್ಲೆಯ ದೇವದುರ್ಗ ಪಟ್ಟಣದ ಗೌತಮ ಓಣಿಯ ಸರಕಾರಿ ಹಿರಿಯ ಪ್ರಾಥಮಿಕ (ಬಾಪೂಜಿ) ಶಾಲೆಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ದೇವದುರ್ಗ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಕಡ್ಡಾಯವಾಗಿ ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ಮಗುವಿನ ಹಕ್ಕಾಗಿರುತ್ತದೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಹಾಗೂ ಕೆಲಸಕ್ಕೆ ನೇಮಿಸಿಕೊಳ್ಳದಂತೆ ಪಾಲಕರಿಗೆ ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕೆಂದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥರೆಡ್ಡಿ ಅವರು ಮಾತನಾಡಿ, 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಅಪಾಯಕಾರಿ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಅಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ತಪ್ಪಿತಸ್ಥ ಮಾಲಕರ ವಿರುದ್ಧ ಸಂಬಧಪಟ್ಟ ಠಾಣೆಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಮತ್ತು ತಿದ್ದುಪಡಿ ಕಾಯ್ದೆ-2016ರಡಿ ಪ್ರಕರಣ ದಾಖಲಿಸಲಾಗುವುದೆಂದು ತಿಳಿಸಿ, ದುಡಿಯುವ ಮಕ್ಕಳು ಎಲ್ಲಿಯಾದರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098/112ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದೇವದುರ್ಗ ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರಾದ ಡಿ.ರಾಜಕುಮಾರ, ತಾಲೂಕು ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕೋಲ್ಕಾರ್, ಶಿಕ್ಷಣ ಸಂಯೋಜಕರಾದ ಮಹಾದೇವಪ್ಪ.ಕೆ, ಪ್ರತಿಭಾ ಸಾಸ್ವಿಗೇರಾ, ಪೆನಾಲ್ ವಕೀಲರು, ಮಹಾದೇವ, ಸಿ.ಆರ್.ಪಿಗಳಾದ ತಿಮ್ಮಪ್ಪ ಬಲ್ಲಿದವ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಹುಸೇನ್ ನಾಯ್ಕ ಸೇರಿದಂತೆ ಇತರರು ಇದ್ದರು.