ರಾಯಚೂರು | ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
ರಾಯಚೂರು : ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯಲಿರುವ ಅಧಿವೇಶದಲ್ಲಿ ಧ್ವನಿ ಎತ್ತಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ ಸಂಯೋಜಿತ) ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದ ಶಾಸಕ ಡಾ.ಶಿವರಾಜ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಈಗಿರುವ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 12,000 ಸಾವಿರ ರೂ. ಮತ್ತು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ 3,000 ಸಾವಿರ ರೂ. ಹೆಚ್ಚಳ ಸೇರಿಸಿ ಒಟ್ಟು 15 ಸಾವಿರ ರೂ. ಮಾಸಿಕ ಗೌರವಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2ಸಾವಿರ ರೂ. ಗೌರವಧನವನ್ನು ಹೆಚ್ಚಿಗೆ ಮಾಡಬೇಕು. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಬೇಕು. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಬೇಕು. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷೆ ಲಕ್ಷ್ಮೀ, ಕಾರ್ಯದರ್ಶಿ ಚೈತ್ರಾ, ಪದಾಧಿಕಾರಿಗಳಾದ ಜುಲೇಖಾ, ನಸೀಮಾ, ರಾಧಾ, ಮಹಾದೇವಿ, ಸಂಧ್ಯಾ ಉಪಸ್ಥಿತರಿದ್ದರು.