ರಾಯಚೂರು | ಮಕ್ಕಳು ತಮ್ಮ ಹಕ್ಕುಗಳನ್ನು ಸ್ವತಂತ್ರವಾಗಿ ಅನುಭವಿಸಬೇಕು : ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ

Update: 2024-11-11 14:24 GMT

ರಾಯಚೂರು : ಜಿಲ್ಲೆಯಲ್ಲಿ ಯಾವುದೇ ಮಕ್ಕಳು ತಮ್ಮ ಹಕ್ಕುಗಳನ್ನು ಸ್ವತಂತ್ರವಾಗಿ ಅನುಭವಿಸಬೇಕು. ಮಕ್ಕಳ ಮೇಲೆ ಯಾವುದಾದರು ದೌರ್ಜನ್ಯಗಳು ಗೊತ್ತಾದರೆ, ಮಕ್ಕಳ ಸಹಾಯವಾಣಿಗೆ ತಿಳಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ ಅವರು ಹೇಳಿದ್ದಾರೆ.

ನ.8ರ ಶುಕ್ರವಾರದಂದು ಜಿಲ್ಲೆಯ ಸಿಂಧನೂರು ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯ ವಿವಾಹ ನಿಷೇದ ಕಾಯ್ದೆ-2006, ಪೋಕ್ಸೋ ಕಾಯ್ದೆ-2012, ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಲೆ ಓದುತ್ತಿರುವ ಮಕ್ಕಳಿಗೆ ಅಥವಾ 18ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡುತ್ತಿರುವುದು ಕಂಡು ಬಂದರೆ, ತಕ್ಷಣವೇ ಅಧಿಕಾರಿಗಳಿಗೆ ಅಥವಾ ಮಕ್ಕಳ ಸಹಾಯವಾಣಿ 1098 ಕರೆ ಮಾಡಬೇಕು. ಅಲ್ಲದೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೌಲಭ್ಯಗಳನ್ನು ಉಪಯೋಗ ಪಡೆದು, ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಳಾದಬೇಕೆಂದರು.

ಈ ಸಂದರ್ಭದಲ್ಲಿ ಸಿಂಧನೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಲಿಂಗನಗೌಡ, ಸಿಂಧನೂರಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ರಾಘವೇಂದ್ರ ಕವಿತಾಳ, ಮಕ್ಕಳ ಸಹಾಯವಾಣಿ ಘಟಕ ಸಂಯೋಜಕ ಸುದರ್ಶನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕಿರಲಿಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಶಿವರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೆಕ್ಕಿಗರು ರಮೇಶ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News