ರಾಯಚೂರು | ರಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ನಿತೀಶ್ ಕೆ. ದಿಢೀರ್ ಭೇಟಿ ; ಪರಿಶೀಲನೆ

ರಾಯಚೂರು : ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆ ರಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಎ.2ರ ಸಂಜೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಹೆರಿಗೆ ಮತ್ತು ಮಕ್ಕಳ ಆಪರೇಷನ್ ವಿಭಾಗವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಹೆಚ್ಚಿನ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು. ಸಣ್ಣ ಮಕ್ಕಳ ಐಸಿಯು ಘಟಕವನ್ನು ವಿಸ್ತರಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
14 ವರ್ಷದ ಮಕ್ಕಳಿಗೆ ಉತ್ತಮ ಚಿಕಿತ್ಸೆ ದೊರೆಕಿಸಲು ಪ್ರಸ್ತುತ ಆಸ್ಪತ್ರೆಯಲ್ಲಿರುವ ಪಿಐಸಿಯು 12 ಹಾಸಿಗೆಯಿಂದ 20 ಹಾಸಿಗೆಗೆ ಹೆಚ್ಚಳ ಮಾಡಬೇಕು. ಇದಕ್ಕಾಗಿ ಬೇಕಾಗಿರುವ ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಳ್ಳಬೇಕು. ಅಲ್ಲದೆ ಮಾಡ್ಯೂಲರ್ ಆಪರೇಷನ್ ಥಿಯೇಟರ್ ಸಂಖ್ಯೆ 4ಕ್ಕೆ ಹೆಚ್ಚಳ ಮಾಡಲು ಸೂಕ್ತ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ನಿರ್ದೇಶನ ನೀಡಿದರು.
ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ನೀಡಿ :
ನಂತರ ವಿವಿಧ ವಾರ್ಡ್ ಗಳಿಗೆ ತೆರಳಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು. ಪರಿಶೀಲನೆ ಸಮಯದಲ್ಲಿ ಹಾಜರಿದ್ದ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಜಿಲ್ಲಾಧಿಕಾರಿಗಳು ಮಾತನಾಡಿದರು. ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ಮತ್ತು ಔಷಧೋಪಚಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ರಿಮ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ರಮೇಶಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಸುರೇಂದ್ರ ಬಾಬು, ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಾಗರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ನಂದಿತಾ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ವಿಜಯಶಂಕರ್, ಡಾ.ಬಾಸ್ಕರ್ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ವೈದ್ಯರು ಇದ್ದರು.