ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ನೌಕರರ ಬೃಹತ್ ಪ್ರತಿಭಟನೆ

Update: 2024-12-19 13:56 GMT

ರಾಯಚೂರು : ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. ಸರ್ಕಾರಿ ನೌಕರರು ಎಂದು ಘೋಷಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

ನಗರದ ಸಾರ್ವಜನಿಕ ಉದ್ಯಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕೇಂದ್ರ ಬಸ್ ನಿಲ್ದಾಣ, ನಗರಸಭೆ ಕಚೇರಿ ಮಾರ್ಗವಾಗಿ ಟಿಪ್ಪುಸುಲ್ತಾನ್ ಉದ್ಯಾನದ ವರೆಗೆ ಬಿಸಿಯೂಟ ನೌಕರರು ಪ್ರತಿಭಟನಾ ರ್‍ಯಾಲಿ ನಡೆಸಿ ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿ 24 ವರ್ಷ ಕಳೆದಿದೆ. ಲಕ್ಷಾಂತರ ಮಕ್ಕಳಿಗೆ ಹಾಲು, ಶಾಲಾ ಸ್ವಚ್ಛತೆ, ಬಿಸಿಯೂಟ ನೀಡಿ ಮಕ್ಕಳನ್ನು ಶಾಲೆಗೆ ಕರೆತರುವ ಜೊತೆಗೆ ಮಕ್ಕಳ ಪೌಷ್ಠಿಕಾಂಶ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ ಆದರೆ ಸರ್ಕಾರ ಕನಿಷ್ಠ ವೇತನ ಹಾಗೂ ಸೌಲಭ್ಯ ನೀಡುತ್ತಿಲ್ಲ ಎಂದು ದೂರಿದರು.

ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯ ಹೈಕೋರ್ಟ್ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸ ಮತ್ತು ಕನಿಷ್ಠ ಕೂಲಿ ಜಾರಿ ಮಾಡಬೇಕು. ಎಂಡಿಎಂ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಕ್ಲಸ್ಟರ್ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಜಿಲ್ಲೆಯಲ್ಲಿ ಮಾಡಬೇಕು. ಕೆಲಸದ ಅವಧಿಯನ್ನು ಬದಲಾಯಿಸಬೇಕು. 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು ಎಂದು ಮನವಿ ಮಾಡಿದರು.

ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಸಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂ. ಪರಿಹಾರ ನೀಡಬೇಕು. ಮಾ.31, 2024 ಕ್ಕೆ ಬಿಸಿ ಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎ.10, 2024ಕ್ಕೆ ಮರು ಆದೇಶ ನೀಡಬೇಕು. 2023ರಲ್ಲಿ ಘೋಷಣೆ ಮಾಡಿದ 6,000 ರೂ. ಗೌರವಧನ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಣುಕಮ್ಮ, ಮರಿಯಮ್ಮ, ಮುಹಮ್ಮದ್ ಹನೀಫ್, ರಮೇಶ ವೀರಾಪೂರ, ವರಲಕ್ಷ್ಮೀ, ಕಲ್ಯಾಣಮ್ಮ, ನಾಗಮ್ಮ ಡಿ.ಎಸ್.ಶರಣ ಬಸವ, ವಿಶಾಲಾಕ್ಷಮ್ಮ, ಶರಣಮ್ಮ ಪಾಟೀಲ, ರೇಣುಕಮ್ಮ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News