ರಾಯಚೂರು | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ರಾಯಚೂರು : ಅಪ್ರಾಪ್ರೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸಿಂಧನೂರು ತಾಲ್ಲೂಕಿನ ಉಮಲೂಟಿ ಗ್ರಾಮದ ಆರೋಪಿ ರಮೇಶ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರ ಏಪ್ರಿಲ್‌ನಲ್ಲಿ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯವು ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ 15,000 ರೂ. ದಂಡ ವಿಧಿಸಿದೆ.
ಎರಡನೇ ಆರೋಪಿ ರಮೇಶ್ ತಂದೆ ಮುದಿಯಪ್ಪನಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ನಾಗರಾಜ ಎಂ.ಕಮ್ಮಾರ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 4,50,000 ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ.
ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದಾರೆ.