ರಾಯಚೂರು | ಶಾಲಾ ಕಟ್ಟಡ ಕಾಮಗಾರಿ ವಿಳಂಬ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ ಹಂತದಲ್ಲಿದೆ. ಸರಿಯಾದ ಕೊಠಡಿಗಳು ಇಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಿದೆ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.
2021-22 ರಲ್ಲಿ ಮಾಜಿ ಶಾಸಕ ಡಿ.ಎಸ್.ಹೂಲಗೇರಿಯವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶಾಲಾ ಕಟ್ಟಡಕ್ಕಾಗಿ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಿದ್ದರು. 5 ಕೊಠಡಿಗಳ ನಿರ್ಮಾಣ ಮಾಡಲು ಗುತ್ತಿಗೆ ಪಡೆದ ಅಮರಗುಂಡಪ್ಪ ಮೇಟಿಯವರು 2 ವರ್ಷ ಕಳೆದರೂ ಕೇವಲ 3 ಕೊಠಡಿಗಳನ್ನು ನಿರ್ಮಿಸಿದ್ದಾರೆ. ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಿದೆ ಎಂದು ಪಾಲಕರು ದೂರಿದ್ದಾರೆ.
ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಬೇಕು. ಮೇಲಾಧಿಕಾರಿಗಳು ಗುತ್ತಿಗೆದಾರನ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರನ್ನು ಒಟ್ಟು ಸೇರಿಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.