ರಾಯಚೂರು | ಜಿಲ್ಲಾ ಪಂಚಾಯತ್ ಸಿಇಓ ಅವರಿಂದ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ

ರಾಯಚೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.16ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದು, ಜಿಲ್ಲೆಯ ನಿರುದ್ಯೋಗಿ ಅಭ್ಯರ್ಥಿಗಳು ಇದರ ಲಾಭ ಪಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಹೇಳಿದರು.
ಎ.4ರ ಶುಕ್ರವಾರ ದಂದು ನಗರದ ಜಿಲ್ಲಾ ಪಂಚಾಯತ್ ಜಲ ನಿರ್ಮಲ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕಲಬುರಗಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಇದಾಗಿದ್ದು, ನಿರುದ್ಯೋಗಿ ಯುವಜನಾಂಗಕ್ಕೆ, ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ಸರ್ಕಾರ ಕ್ರಮಕೈಗೊಂಡಿದ್ದು,. ಈ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊಳ್ಳುವ ಮೂಲಕ ಉದ್ಯೋಗ ಮೇಳದ ಲಾಭ ಪಡೆಯುವಂತೆ ಸಲಹೆ ನೀಡಿದರು.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸರ್ಕಾರಿ ಕಚೇರಿ, ಪಾಲಿಟೆಕ್ನಿಕ್, ಐಟಿಐ, ಡಿಪ್ಲೊಮಾ, ವಿವಿಧ ಕಾಲೇಜುಗಳ ವ್ಯಾಪ್ತಿಯಲ್ಲಿ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ನಿರಂತರವಾಗಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಾ.ಟಿ.ರೋಣಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಪಾಟೀಲ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಅನಿಲ್ ಕುಮಾರ ಜಿಂದೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಸದಾಶಿವಪ್ಪ ಸೇರಿದಂತೆ ಇತರರು ಇದ್ದರು.