ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಬಂಧನ
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಪರಪ್ಪನ ಅಗ್ರಹಾರ ಕಾರಾಗೃಹದಿಂದ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಕರೆದೊಯ್ದು ನಂತರ ಬಂಧಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.
2020ರಿಂದ 2022ರ ವರೆಗೆ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 40 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈಗಾಗಲೇ ಸಂತ್ರಸ್ತೆಯನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಇನ್ನು, ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಮತ್ತು ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಮತ್ತು ಲೋಕಿ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.