ಡಿ.ಕೆ.ಸುರೇಶ್ ರಾಜ್ಯದ ಪರವಾಗಿ ಧ್ವನಿಯೆತ್ತಿದ ಏಕೈಕ ಸಂಸದ : ಮುಖ್ಯಮಂತ್ರಿ ಚಂದ್ರು ಶ್ಲಾಘನೆ

Update: 2024-04-19 11:50 GMT

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪ್ರಚಾರ ಮಾಡಿದರು.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಡಿ.ಕೆ.ಸುರೇಶ್ ಜೊತೆಗೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಚಂದ್ರು, ಡಿ.ಕೆ. ಸುರೇಶ್ ರಾಜ್ಯದ ಅತ್ಯುತ್ತಮ ಸಂಸದರಾಗಿದ್ದು, ಅವರಿಗೆ ಈ ಬಾರಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ನೀಡುವ ಬಗ್ಗೆ ಎಚ್‌.ಡಿ. ಕುಮಾರಸ್ವಾಮಿ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಅವರು ಕೂಡ ಅದೇ ಮನಸ್ಥಿತಿಯನ್ನು ಬೆಳೆಸಿಕೊಂಡಿದ್ದಾರೆ. ಇಂತಹ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಈ ಬಾರಿ ಡಿ.ಕೆ. ಸುರೇಶ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು.

ಸೋಲುವ ಭಯದಿಂದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅವರು ಬಂಧಿಸಿರುವುದು ಕೇಜ್ರಿವಾಲ್‌ ಅವರನ್ನು ಮಾತ್ರವಲ್ಲ ಪ್ರಜಾಪ್ರಭುತ್ವವನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬ್ಯಾಂಕ್‌ ಅಕೌಂಟ್‌ಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಕೇಳಿಕೊಂಡರು.

ಇದು ಪಾಂಡವರು ಮತ್ತು ಕೌರವರು ನಡುವಿನ ಯುದ್ಧವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜನಪರ ಯೋಜನೆಗಳನ್ನು ಮಾಡಿದ್ದರೆ, ಕೇಂದ್ರ ಸರ್ಕಾರ ಜನರ ಹಣವನ್ನು ಕೊಳ್ಳೆ ಹೊಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಅವರು ಮಾಡಿದ ಯಾವ ಘೋಷಣೆಗಳನ್ನು ಕೂಡ ಈಡೇರಿಸಿಲ್ಲ ಎಂದರು.

 ಡಿ.ಕೆ. ಸುರೇಶ್ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಧೈರ್ಯವಾಗಿ ಪ್ರಶ್ನಿಸಿದ್ದಾರೆ. ಉಳಿದ 27 ಸಂಸದರು ಗುಲಾಮಗಿರಿಯಲ್ಲಿ ಬಿದ್ದಿದ್ದಾರೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಡಿ.ಕೆ. ಸುರೇಶ್ ಅವರನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ರಾಮನಗರ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೈರೇಗೌಡ ಸೇರಿದಂತೆ ಎಲ್ಲ ಜಿಲ್ಲಾ ಪದಾಧಿಕಾರಿಗಳು ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News