ಚನ್ನಪಟ್ಟಣ ಉಪಚುನಾವಣೆ | ನಿಖಿಲ್ ಪರವಾಗಿ ಕುಮಾರಸ್ವಾಮಿ, ಯಡಿಯೂರಪ್ಪ ಜಂಟಿ ಪ್ರಚಾರ

Update: 2024-11-06 14:30 GMT
Photo of Kumaraswamy and Yeddyurappa
  • whatsapp icon

ಚನ್ನಪಟ್ಟಣ : ಚನ್ನಪಟ್ಟಣ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಬುಧವಾರ ಜಂಟಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಹಿಂದೆ ನಾನು ಮತ್ತು ಕುಮಾರಸ್ವಾಮಿ ಸೇರಿ ಸರಕಾರ ಮಾಡಿ ಅತ್ಯುತ್ತಮ ಆಡಳಿತ ನೀಡಿದ್ದೆವು. ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು ಹೆಣ್ಣುಮಕ್ಕಳ ಕಲ್ಯಾಣಕ್ಕೆ ಉತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದೆವು. ನಿಮ್ಮ ಮನೆಯಲ್ಲಿ ಹುಟ್ಟುವ ಹೆಣ್ಣು ಮಗಳು ಹದಿನೆಂಟು ವರ್ಷ ವಯಸ್ಸಿಗೆ ಬರುವ ಹೊತ್ತಿಗೆ ಹತ್ತಾರು ಲಕ್ಷ ರೂಪಾಯಿ ಹಣ ಸಿಗುತ್ತಿತ್ತು. ಆ ಮಕ್ಕಳು ಗೌರವ, ಸ್ವಾಭಿಮಾನದಿಂದ ಬಾಳಿ ಬದುಕುವಂತಹ ಕಾರ್ಯಕ್ರಮ ಮಾಡಿದ್ದೆವು ಎಂದು ಹೇಳಿದರು.

ಶಾಲೆಗೆ ತೆರಳುವ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಾನು ಕುಮಾರಸ್ವಾಮಿ ಸೇರಿ ಉಚಿತ ಬೈಸಿಕಲ್ ಯೋಜನೆ ಜಾರಿ ಮಾಡಿದ್ದೆವು. ಅದು ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ. ಇದನ್ನೆಲ್ಲ ಜನತೆ ಮರೆಯಬಾರದು ಎಂದು ಯಡಿಯೂರಪ್ಪ ಮನವಿ ಮಾಡಿದರು.

ಅಷ್ಠೇ ಅಲ್ಲ, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನಾವಿಬ್ಬರೂ ಜಾರಿ ಮಾಡಿದ್ದೆವು. ಸಮಾಜಕ್ಕೆ ಅವೆಲ್ಲ ಉಪಯೋಗ ಆಗಿವೆ. ಕೇಂದ್ರ ಸರಕಾರ ರೈತ ಕುಟುಂಬಕ್ಕೆ ಹತ್ತು ಸಾವಿರ ರೂಪಾಯಿ ಕೊಟ್ಟರೆ, ಅದಕ್ಕೆ ಆರು ಸಾವಿರ ರೂಪಾಯಿ ಸೇರಿಸಿ ಹದಿನಾರು ಸಾವಿರ ರೂಪಾಯಿ ಕೊಡುತ್ತಿದ್ದೆವು. ನಿಮ್ಮೆಲ್ಲರ ಅಭಿವೃದ್ಧಿಗಾಗಿ ನಾನು, ಕುಮಾರಸ್ವಾಮಿ ಶಕ್ತಿಮೀರಿ ಕೆಲಸ ಮಾಡಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ನಾವು ಅಭಿವೃದ್ಧಿ ವಿಷಯ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇವೆ. ಅಭಿವೃದ್ಧಿಯ ಮೇಲೆ ಮತ ಕೇಳುತ್ತಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷ ಸಮಾಜ ಒಡೆಯುವ ದಿಕ್ಕಿನಲ್ಲಿ ಚುನಾವಣಾ ಕಣವನ್ನು ಕಲುಷಿತಗೊಳಿಸಿದೆ ಎಂದು ಆರೋಪ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಬರೀ ಸುಳ್ಳು ಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡಲು ಸಿದ್ದ ಇದ್ದೆವು. ಕೊನೆಗೆ ಬಿಜೆಪಿ ಟಿಕೆಟ್ ಮೇಲೆ ನಿಲ್ಲುತ್ತೇನೆ ಎಂದು ಕ್ಯಾತೆ ತೆಗೆದರು. ಕೊನೆಗೆ ಬಿಜೆಪಿ ಟಿಕೆಟ್ ಕೊಡಲಿಕ್ಕೆ ಕೂಡ ನಾನು ಸಮ್ಮತಿಸಿದೆ ಎಂದು ಕುಮಾರಸ್ವಾಮಿ ಹೇಳಿದರು.

ಆದರೆ, ಲೋಕಸಭೆ ಚುನಾವಣೆ ವೇಳೆಯಲ್ಲೆ ಕಾಂಗ್ರೆಸ್ ನಾಯಕರ ಜತೆ, ಅದರಲ್ಲಿಯೂ ಡಿ.ಕೆ. ಸಹೋದರರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದ ಅವರು(ಯೋಗೇಶ್ವರ್) ಅಭ್ಯರ್ಥಿ ಆಯ್ಕೆಯ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಿಗಿದರು. ನಾವು ಸಮರ್ಥ ಅಭ್ಯರ್ಥಿ ಕಣಕ್ಕೆ ಇಳಿಸುವ ಉದ್ದೇಶದಿಂದ ನಿಖಿಲ್ ಕುಮಾರಸ್ವಾಮಿಯನ್ನು ಎನ್ಡಿಎ ಅಭ್ಯರ್ಥಿಯಾಗಿ ಒಮ್ಮತವಾಗಿ ಕಣಕ್ಕೆ ಇಳಿಸಿದೆವು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್ಮೂರ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ರಮೇಶ್, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಸಂಸದ ಮಲ್ಲೇಶ್ ಬಾಬು ಸೇರಿದಂತೆ ಅನೇಕ ನಾಯಕರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News