ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ: ಸಚಿವ ಕೆ.ವೆಂಕಟೇಶ್

Update: 2024-09-10 15:56 GMT

ರಾಮನಗರ : ರಾಮನಗರ ಜಿಲ್ಲೆಯ ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿ ಜೊತೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಅವರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವುದಾಗಿ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದರು.

ಮಂಗಳವಾರ ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿದ ನಂತರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಮನಗರ ಜಿಲ್ಲೆಯ ರೇಷ್ಮೆ ಬೆಳೆಯ ಕುರಿತು ಶಾಸಕರು, ಅಧಿಕಾರಿಗಳು, ರೈತರು ಮತ್ತು ರೀಲರ್‌ ಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಟ್ಟ ಮೊದಲ ಬಾರಿಗೆ ಸಚಿವರಾಗಿದ್ದಾಗ ರೇಷ್ಮೆ ಇಲಾಖೆಯನ್ನು ನಿಭಾಯಿಸಿದ್ದರು, ಅವರಿಗೆ ರೇಷ್ಮೆ ಬೆಳೆಗಾರರ ಸಮಸ್ಯೆಗಳನ್ನು ಮನದಟ್ಟು ಮಾಡಿಕೊಡುವುದಾಗಿ ತಿಳಿಸಿದ ವೆಂಕಟೇಶ್, ರಾಜ್ಯ ಸರಕಾರವು ರೇಷ್ಮೆ ಬೆಳೆಗಾರರಿಗೆ ಒದಗಿಸಿರುವ ಸವಲತ್ತುಗಳನ್ನು ನಿಗದಿತ ಅವಧಿಯೊಳಗೆ ತಲುಪಿಸುವುದು ಇಲಾಖೆಯ ಕರ್ತವ್ಯ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೇಷ್ಮೆ ಬೆಳೆಗಾರರು, ರೀಲರ್‌ ಗಳ ಕಷ್ಟವನ್ನು ಅರಿತು ರಾಜ್ಯ ಸರಕಾರವು ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ, ಅಧಿಕಾರಿಗಳು ಈ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಕ್ಷೇತ್ರ ಭೇಟಿ ನೀಡುವ ಮೂಲಕ ಅಧಿಕಾರಿಗಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಸ್ಥೂಲವನ್ನು ಅರಿತುಕೊಳ್ಳಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ನೂತನ ರೇಷ್ಮೆ ಮಾರುಕಟ್ಟೆಯನ್ನು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಬಹಳ ವ್ಯವಸ್ಥಿತವಾಗಿ ನಿರ್ಮಿಸಲಾಗುತ್ತಿದೆ, ಅಲ್ಲದೇ ವಿವಿಧ ಜಿಲ್ಲೆಗಳಲ್ಲಿ ಇಲಾಖೆಗೆ ಸೇರಿದ ಸಾಕಷ್ಟು ಜಮೀನು ಲಭ್ಯವಿದ್ದು, ಅಲ್ಲಿಯೂ ಬೆಳೆಗಾರರ ಹಿತರಕ್ಷಣೆ ದೃಷ್ಟಿಯಿಂದ ವಿವಿಧ ರೀತಿಯ ಚಟುವಟಿಕೆಗಳನ್ನು ಮಾಡಲಾಗುವುದು ಎಂದು ವೆಂಕಟೇಶ್ ಹೇಳಿದರು.

ರೇಷ್ಮೆ ಇಲಾಖೆಯ ಹಣಕಾಸಿನ ತೊಂದರೆಗಳನ್ನು ನಿವಾರಿಸಲು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ, ರೇಷ್ಮೆ ಬೆಳೆಗಾರರು, ರೀಲರ್‌ ಗಳಿಗೆ ಒಳ್ಳೆಯದನ್ನು ಮಾಡಬೇಕು. ಈ ಉದ್ದಿಮೆ ಉಳಿಯಲು ಸಹಾಯ ಮಾಡಬೇಕು ಎನ್ನುವುದನ್ನು ಅರಿತು ಕೆಲಸ ಮಾಡಲಾಗುತ್ತಿದೆ, ಈ ದಿಸೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಕೈಜೋಡಿಸಿದ್ದಾರೆ, ಮುಂಬರುವ ದಿನಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಎಲ್ಲ ರೀತಿಯ ಸೌಕರ್ಯ ಹಾಗೂ ರೀಲರ್‌ ಗಳಿಗೆ ಸಹಕಾರ ನೀಡಲಾಗುವುದು ಎಂದು ವೆಂಕಟೇಶ್ ಹೇಳಿದರು.

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಪ್ರತಿ ಮೂರು ತಿಂಗಳಿಗೊಮ್ಮೆ ರೇಷ್ಮೆ ಬೆಳೆಗಾರರು ಹಾಗೂ ರೀಲರ್‌ ಗಳ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಬೇಕು. ನಗರದಲ್ಲಿರುವ ಮಾರುಕಟ್ಟೆಯಲ್ಲಿ ಪ್ರತೀ ದಿನ 2.5 ರಿಂದ 3 ಕೋಟಿ ರೂ.ಗಳ ವಹಿವಾಟು ನಡೆಯುತ್ತಿದ್ದು, 6 ಲಕ್ಷಕ್ಕೂ ಹೆಚ್ಚು ಮೊತ್ತ ತೆರಿಗೆ ಪಾವತಿಲಾಗುತ್ತಿದೆ. ಆದ ಕಾರಣ ಹಳೆಯ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್, ರೇಷ್ಮೆ, ಕೃಷಿ ಅಭಿವೃದ್ಧಿ ಆಯುಕ್ತ ಎಂ.ಬಿ.ರಾಜೇಶ್ ಗೌಡ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಡಾ.ಶ್ಯಾಮಲಾ ಇಕ್ಬಾಲ್, ಜಿ.ಪಂ.ಸಿಇಒ ದಿಗ್ವಿಜಯ್ ಬೋಡ್ಕೆ, ಉಪವಿಭಾಗಧಿಕಾರಿ ಬಿನೋಯ್, ರೇಷ್ಮೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News