ಖ್ಯಾತ ಹಿರಿಯ ಸಾಹಿತಿ ಕಮಲ ಹಂಪನಾ ನಿಧನ
ಬೆಂಗಳೂರು : ಹಿರಿಯ ಸಾಹಿತಿ ನಾಡೋಜ ಕಮಲ ಹಂಪನಾ (89) ಅವರು ರಾಜಾಜಿನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮಲಗಿದ್ದಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಾಹಿತ್ಯ ಅಕಾಡೆಮಿ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಕಮಲ ಅವರು ಸಾಹಿತಿ ಹಂ.ಪ. ನಾಗರಾಜಯ್ಯ ಅವರ ಪತ್ನಿ.
ಕಮಲಾ ಹಂಪನಾ ಅವರು ಕನ್ನಡದ ಲೇಖಕರಾಗಿ, ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.
ಅಧ್ಯಯನ, ಅಧ್ಯಾಪನ, ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. ಅವರ ಧೀರ್ಘಕಾಲಿಕ ಹಾಗೂ ಮೌಲಿಕ ಕೊಡುಗೆಗೆ ಸಂದ ಗೌರವಗಳಲ್ಲಿ ಪ್ರಮುಖವಾದುವು.
ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆ ಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas, ಹಾಗೂ Jainism and Other Essays ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ರಚಿಸಿದ್ದಾರೆ.
ಕಮಲ ಹಂಪನಾ ಅವರು ಪತಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಬಂಧು ಮಿತ್ರರ ಸಹಿತ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಅವರ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು, ಹಿರಿಯ ಸಾಹಿತಿಗಳು ಸೇರಿದಂತೆ ಅವರ ಅಪಾರ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕನ್ನಡ ದ ಹಿರಿಯ ಸಾಹಿತಿಗಳಾದ ಕಮಲ ಹಂಪನಾ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕಮಲ ಅವರ ಇಡೀ ಕುಟುಂಬ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯವಾದ ಕೊಡುಗೆಯನ್ನ ನೀಡುತ್ತಿದೆ. ಭಗವಂತ ಅವರ ಕುಟುಂಬಕ್ಕೆ ಅವರ ಅಗಲಿಕೆಯ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಕನ್ನಡ ಸಾಂಸ್ಕೃತಿಕ ಲೋಕ ಅವರನ್ನು ಸದಾ ಗೌರವಪೂರ್ವಕವಾಗಿ ನೆನಪಿಸಿಕೊಳ್ಳುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.