ಭದ್ರಾ ಜಲಾಶಯ| ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು: ಸಚಿವ ಮಧು ಬಂಗಾರಪ್ಪ

Update: 2024-01-06 12:23 GMT

ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶನಿವಾರ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು,ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯೂಸೆಕ್ ಮತ್ತು ಎಡದಂಡ ನಾಲೆಗೆ 380 ಕ್ಯೂಸೆಕ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದಾಗಿದೆ ಎಂದರು.

ಪ್ರಸ್ತುತ ಚಳಿ ಇದ್ದು ವಾತಾವರಣ ತಂಪಿದೆ. ಮಾರ್ಚ್ ನಂತರ ಬೇಸಿಗೆ ಹೆಚ್ಚಲಿದ್ದು, ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಕಷ್ಟವಾಗಬಹುದು.  ನೀರಿನ ಅಭಾವವಿರುವ ಕಾರಣ ಪ್ರಸ್ತುತ ರೈತರು ಭತ್ತ ಬೆಳೆಯದಿದ್ದರೆ ಒಳಿತು ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮಾತನಾಡಿ, ಮುಂಬರುವ ಮಾನ್ಸೂನ್ ಮಳೆಗಾಲ ಸ್ವಲ್ಪ ವಿಳಂಬವಾದರೂ ಅಲ್ಲಿಯವರೆಗೆ ನೀರು ನೀಡಲು ಅನುಕೂಲವಾಗುವಂತೆ ನೀರು ವಿತರಣೆಯ ಯೋಜನೆ ಹಾಕಿಕೊಳ್ಳಬೇಕು. ಬೇಸಿಗೆಗೆ ನೀರು ಪೂರೈಕೆಯಾಗುವಂತೆ ನಿರ್ವಹಣೆ ಮಾಡುವ ಅಗತ್ಯವಿದೆ ಎಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ. ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಇಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News