ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

Update: 2025-04-25 12:11 IST
ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ
  • whatsapp icon

ಶಿವಮೊಗ್ಗ: ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಬೇಗಾನೆ ರಾಮಯ್ಯನವರು ನಿಧನರಾದ ವಿಷಯ ತಿಳಿದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಶುಕ್ರವಾರ ಅವರು ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. 'ಬೋರ್ವೆಲ್ ರಾಮಯ್ಯ' ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಹೇಳಿದರು.

ಬೇಗಾನೆ ರಾಮಯ್ಯನವರು 90 ವರ್ಷ ವಯಸ್ಸಿನವರಾಗಿದ್ದರು. ಅವರು ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಆರ್. ಗುಂಡೂರಾವ್ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅವರು ಕೊಳವೆಬಾವಿಗಳನ್ನು ಕೊರೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಕಾರ್ಯದಿಂದಾಗಿ ಅವರನ್ನು 'ಬೋರ್‌ವೆಲ್ ರಾಮಯ್ಯ' ಎಂದು ಕರೆಯಲಾಗುತ್ತಿತ್ತು.

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪನವರು ತಮ್ಮ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ಮಂತ್ರಿಗಳಾಗಿದ್ದಾಗ ಬೇಗಾನೆ ರಾಮಯ್ಯನವರು ಕುಮಾರ ಕೃಪಾ ನಿವಾಸದ ಬಳಿಯೇ ನೆಲೆಸಿದ್ದರು, ಅಂದಿನಿಂದ ನಮ್ಮ ಬಾಲ್ಯದ ದಿನಗಳಲ್ಲಿ ಅವರ ಒಡನಾಟವಿತ್ತು, ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಸಚಿವರೊಂದಿಗೆ ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News