ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ಕ್ರಮವನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಿಂದ ಮೆರವಣಿಗೆ, ಪ್ರತಿಭಟನೆ

Update: 2024-08-19 09:19 GMT

ಶಿವಮೊಗ್ಗ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ‌ ಮೆರವಣಿಗೆ ನಡೆಸಲಾಯಿತು.

ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಕಾರ್ಯಕರ್ತರು ನಗರದ ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಸೀನಪ್ಪ ಶೆಟ್ಟಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.

ಪ್ರತಿಭಟನಾ ಮೆರವಣಿಗೆಯುದ್ಧಕ್ಕೂ ಕಾಂಗ್ರೆಸ್ ಕಾರ್ಯಕರ್ತರು ತೊಲಗಲಿ, ತೊಲಗಲಿ ರಾಜ್ಯಪಾಲರು ತೊಲಗಲಿ ಎಂಬ ಘೋಷಣೆಗಳ ಕೂಗಿದರು.

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಜೈಲಿಗೆ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು

ರಾಜ್ಯಪಾಲರು ಕನ್ನಡಿಗರಿಗೆ ದ್ರೋಹ‌ ಮಾಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ.‌ಕುಮಾರಸ್ವಾಮಿ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ‌ ಏಕೆ ಕೊಡುತ್ತಿಲ್ಲ. ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಹುನ್ನಾರು ಮಾಡಿದೆ. 136 ಶಾಸಕರು ಗೆದ್ದಿದ್ದೇವೆ ಯಾವುದಕ್ಕೂ ಬಗ್ಗಲ್ಲ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಕಲಗೋಡು ರತ್ನಾಕರ್, ಎಚ್.ಸಿ. ಯೋಗೇಶ್, ಜಿ.ಡಿ.‌ಮಂಜುನಾಥ, ಎನ್. ರಮೇಶ್, ಎಂ.‌ಶ್ರೀಕಾಂತ್, ಅನಿತಾ ಕುಮಾರಿ, ಕಲೀಂ ಪಾಷಾ, ಮಂಜುನಾಥ್, ಶೇಷಾದ್ರಿ, ಸಿ. ಹನಮಂತು ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News