ಟಾಸ್ಕ್ ಫೋರ್ಸ್ ರಚನೆ ಕುರಿತು ಸಿಎಂ ಜೊತೆ ಚರ್ಚೆ : ಶಾಲಿನಿ ರಜನೀಶ್
ಬೆಂಗಳೂರು: "ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ ಸಮಸ್ಯೆ ಪರಿಹಾರ ಕುರಿತು ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಭೂಮಿ ಹಕ್ಕಿನ ಸಮಸ್ಯೆಗೆ ಶಾಸನಾತ್ಮಕ ಪರಿಹಾರ ಒದಗಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗುವುದು" ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದರು
ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು, ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದರು.
ಶರಾವತಿ ಮುಳುಗಡೆ ಸಂತ್ರಸ್ಥರ ಪರವಾಗಿ ರಾಜ್ಯ ಸರಕಾರವಿದೆ. ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ ಕುರಿತು ಶಾಸನಾತ್ಮಕ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೂರು ಎಕರೆಗಿಂತ ಕೆಳಗಿನ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿ ದಬ್ಬಾಳಿಕೆ ಮಾಡುತ್ತಿರುವ ಬಗ್ಗೆ ರೈತರ ನಿಯೋಗದ ಮುಖಂಡರಾದ ತೀ.ನಾ ಶ್ರೀನಿವಾಸ್ ಸಭೆಯಲ್ಲಿ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಅರಣ್ಯಾಧಿಕಾರಿಗಳು ರೈತ ವಿರೋಧಿ ಕ್ರಮವನ್ನು ಕೈಗೊಂಡರೇ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಗರ ಬಾರಂಗಿ ಹೋಬಳಿಯ ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸರಕಾರ ಬದ್ದವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು,ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಅರಣ್ಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ಸಭೆ ಕರೆದು ಚರ್ಚಿಸಲಾಗುವುದು ಎಂದರು.
ಮುಳುಗಡೆ ಆಗದ ಕೆಪಿಸಿ ಭೂಮಿಯನ್ನು ಸಕ್ರಮೀಕರಣಗೊಳಿಸುವ ಕುರಿತು ಪುನರ್ ಸರ್ವೆ ಮಾಡಬೇಕು. ಈ ಕುರಿತು ನ್ಯಾಯಾಲಯದಲ್ಲಿ ವಾದಿಸಲು ಸರಕಾರ ಕಠಿಣಾತ್ಮಕ ಹೆಜ್ಜೆ ಇಡಬೇಕು ಎಂದು ರೈತ ಮುಖಂಡರು ಸರಕಾರದ ಗಮನ ಸೆಳೆದರು. ಈ ಬಗ್ಗೆ ಕ್ರಮ ವಹಿಸುವ ಕುರಿತು ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.
ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್, ವಿ.ಜಿ ಶ್ರೀಕರ್, ದಿನೇಶ್ ಶಿರಿವಾಳ, ದೂಗುರು ಪರಮೇಶ್ವರ್, ಬಿ.ಎ ರಮೇಶ್ ಹೆಗಡೆ, ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು.
ಅಧಿಕಾರಿಗಳಿಗೆ ಚಾಟಿ :
ಅರಣ್ಯ ಹಕ್ಕು ಕಾಯ್ದೆಯಡಿ ರೈತರು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿದ್ದಾರೆ. ಜಿಲ್ಲೆಯಲ್ಲಿ 80 ಸಾವಿರ ಅರ್ಜಿಗಳನ್ನು ವಜಾ ಮಾಡಿದ್ದಾರೆ ಎಂದು ರೈತ ಮುಖಂಡ ತೀ.ನಾ ಶ್ರೀನಿವಾಸ್ ಸರಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಸ್ ಅವರು, ಸರಕಾರದ ಆದೇಶದ ವಿರುದ್ದವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆದುಕೊಳ್ಳಬಾರದು. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ರೈತರ ಅರ್ಜಿಗಳನ್ನು ವಿಚಾರಣೆ ನಡೆಸದೇ ವಜಾಗೊಳಿಸಿದ್ದರೇ ಕ್ರಮ ವಹಿಸಲಾಗುವುದು. ರಾಜ್ಯ ಮಟ್ಟದಲ್ಲಿ ಅರಣ್ಯ ಹಕ್ಕು ಸಭೆ ಕರೆದು ಚರ್ಚೆ ನಡೆಸುತ್ತೇವೆ. ಅರ್ಜಿಗಳನ್ನು ಪುನರ್ ಪರಿಶೀಲನೆ ನಡೆಸಲು ನಿರ್ದೇಶನ ನೀಡಲಾಗುವುದು ಎಂದರು.
ಸುಪ್ರೀಂ ಕೋರ್ಟ್ ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದಂತೆ ಸರಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ನುರಿತ ವಕೀಲರನ್ನು ನೇಮಕ ಮಾಡಲಾಗಿದೆ. ಇದನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು.
-ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು.