ಶಿವಮೊಗ್ಗ | ಪ್ರಿಯತಮೆಯ ಕತ್ತು ಹಿಸುಕಿ ಹತ್ಯೆಗೈದ ಆರೋಪಿಯ ಬಂಧನ

Update: 2024-07-24 10:43 GMT

ಸೃಜನ್‌/ಸೌಮ್ಯ

ಶಿವಮೊಗ್ಗ: ಪರಸ್ಪರ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ  ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು ಕೊಪ್ಪ ಮೂಲದ ಸೌಮ್ಯ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್‌ ಎಂಬಾತನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ:ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್‌ಗೆ  ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯಾ ಎಂಬವರ ಪರಿಚಯವಾಗಿದೆ. ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರಿಂದ ಸೃಜನ್  ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ಇಬ್ಬರಿಗೂ ಪರಿಚಯವಾಗಿ ಪ್ರೀತಿಗೆ ತಿರುಗಿದೆ. ಇಬ್ಬರದ್ದೂ ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ.2ರಂದು ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು ಎಂದು ತಿಳಿದು ಬಂದಿದೆ. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಾಳೆ. ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು, ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಗಳು ಮನೆಗೆ ಬರದಿದ್ದಕ್ಕೆ ಗಾಬರಿಗೊಂಡ ಪೋಷಕರು ತಮ್ಮ ಮಗಳು ನಾಪತ್ತೆಯಾಗಿರುವ ಬಗ್ಗೆ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ಬಂದಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಯುವತಿಯನ್ನು ಕೊಲೆ ಮಾಡಿ ಹೂತಿಟ್ಟಿರುವ ಬಗ್ಗೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News