ಶಿವಮೊಗ್ಗ: ಫ್ರೀಡಂ ಪಾರ್ಕ್‌ಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

Update: 2024-01-07 14:11 GMT

ಶಿವಮೊಗ್ಗ: ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭಾನುವಾರ ಫ್ರೀಡಂ ಪಾರ್ಕ್‌ಗೆ ಭೇಟಿ ಪರಿಶೀಲನೆ ನೀಡಿದ್ದರು.

ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್‌ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲರಿಗೆ ಸೂಚನೆ:

ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನೆರವಾಗಿ ಎಂದು ಜಿಲ್ಲೆಯ ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಪ್ರಾಚಾರ್ಯರಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳು ಚಾಲನಾ ಕಾರ್ಯಕ್ರಮಕ್ಕೆ ಬರುವಂತಾಗಬೇಕು. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಯ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News