ಶಿವಮೊಗ್ಗ| ಮಕ್ಕಳಿಂದ ಶೌಚಾಲಯ ಸ್ವಚ್ಚತೆ ವಿಡಿಯೋ ವೈರಲ್; ಪ್ರಭಾರ ಮುಖ್ಯ ಶಿಕ್ಷಕ ಅಮಾನತು: ಡಿಡಿಪಿಐ ಆದೇಶ

Update: 2023-12-28 14:46 GMT

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ನಡೆದಿದೆ.

ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾಂ ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ. ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದೆ. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಆಗ್ರಹಿಸಿದ್ದಾರೆ.

ಶಿಕ್ಷಕ ಅಮಾನತು:

ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರು ಅಮಾನತುಗೊಳಿಸಿದ್ದಾರೆ.

ಭದ್ರಾವತಿ ಬಿಇಒ ನಾಗೇಂದ್ರಪ್ಪ ನೀಡಿದ ವರದಿ ಆಧರಿಸಿ ಡಿಡಿಪಿಐ ಅವರು ಇಲಾಖೆ ವಿಚಾರಣೆ ಕಾಯ್ದಿರಿಸಿ ಗುರುವಾರ ಅಮಾನತುಗೊಳಿಸಿದ್ದಾರೆ.

ಮುಖ್ಯ ಶಿಕ್ಷಕ ಹುದ್ದೆಯ ಪ್ರಭಾರದಲ್ಲಿದ್ದ ಶಂಕರಪ್ಪ ಕಳೆದ 11 ವರ್ಷಗಳಿಂದ ಗುಡ್ಡದ ನೇರಳಕೆರೆ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News