ತಮ್ಮದೇ ಸರಕಾರ ರೂಪಿಸುವ ನೀತಿ ನಿಯಮಗಳ ಅರಿವಿಲ್ಲದ ನಳಿನ್ ಕುಮಾರ್ ಸಂಸದ ಸ್ಥಾನಕ್ಕೆ ಅಪಚಾರ: ರಾಜ್ಯ ಕಾಂಗ್ರೆಸ್ ಟೀಕೆ

Update: 2023-07-16 07:51 GMT

ಬೆಂಗಳೂರು, ಜು.16: ತಮ್ಮದೇ ಸರಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಕಟೀಲು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಟೀಕಿಸಿದೆ

ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಆಹಾರ ಸಿದ್ಧಪಡಿಸುವ ವೇಳೆ ಪಾಲಿಸಬೇಕಾದ ನಿಯಮಗಳು ಕುರಿತಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಹೊಸ ಮಾರ್ಗಸೂಚಿಯನ್ನು ಬಿಜೆಪಿ ರಾಜ್ಯಾಧ್ಷಕ್ಷರೂ ಆಗಿರುವ ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಟೀಕಿಸಿದ್ದರು. ಇದಕ್ಕೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಕಟೀಲು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೇ ಆದೇಶ ಹೊರಡಿಸಿದೆ ಎಂದು ಮೂರು ವರ್ಷ ಹಿಂದಿನ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.

ನಳಿನ್ ಕುಮಾರ್ ಅವರೇ, ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಮೋದಿಯವರು ಈ ಆದೇಶ ಹೊರಡಿಸಿದ್ದೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲು ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ ಎಂದು ವ್ಯಂಗ್ಯವಾಡಿದೆ.

ನಳಿನ್ ಕುಮಾರ್ ಹೇಳಿದ್ದೇನು?

ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಪಾಲಿಸಬೇಕಾದ ನೂತನ ಶಿಷ್ಟಾಚಾರಗಳ ಪಟ್ಟಿಯನ್ನು ರಾಜ್ಯ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಅದರಲ್ಲಿ ʼಬಿಸಿಯೂಟ ಅಡುಗೆದಾರರುʼ ಕೈಗೆ ಬಳೆ ಧರಿಸಬಾರದು ಎಂದು ತಿಳಿಸಿದೆ. ಇದನ್ನು ವಿರೋಧಿಸಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲು, "ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ. ʼಬಿಸಿಯೂಟ ಕಾರ್ಯಕರ್ತೆಯರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸಿಗರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ" ಎಂದು ಹೇಳಿದ್ದಾರೆ.




Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News