ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಭಾರತ ನಿರಾಕರಣೆ : ಐಸಿಸಿಯಿಂದ ಸ್ಪಷ್ಟೀಕರಣ ಕೋರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರ
ಕರಾಚಿ : ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಪಿಸಿಬಿಗೆ ತಿಳಿಸಲಾಗಿದ್ದು, ಹೈಬ್ರಿಡ್ ಮಾದರಿಯ ಬಗ್ಗೆ ಯಾವುದೇ ಪದ ಪ್ರಸ್ತಾಪಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಚಾಂಪಿಯನ್ಸ್ ಟ್ರೋಫಿ ಆತಿಥ್ಯದ ಬಗ್ಗೆ ಸ್ಪಷ್ಟೀಕರಣ ಕೋರಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(ಪಿಸಿಬಿ)ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮೊರೆ ಹೋಗಲು ನಿರ್ಧರಿಸಿದೆ.
ಬಿಸಿಸಿಐ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುವುದಿಲ್ಲ ಎಂದು ಪಿಸಿಬಿಗೆ ಐಸಿಸಿ ತಿಳಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಹೈಬ್ರಿಡ್ ಮಾದರಿ ವ್ಯವಸ್ಥೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಪಿಸಿಬಿ ಮೂಲಗಳು ತಿಳಿಸಿವೆ.
ಕಳೆದ ವರ್ಷ ಏಶ್ಯ ಕಪ್ನಲ್ಲಿ ಹೈಬ್ರಿಡ್ ಮಾದರಿಯನ್ನು ಅನುಸರಿಸಲಾಗಿತ್ತು. ಆಗ ಭಾರತದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಲಾಗಿತ್ತು. ಇತರ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡಲಾಗಿತ್ತು.
ಮುಂದಿನ ವರ್ಷ ಫೆಬ್ರವರಿಯಲ್ಲಿ ನಿಗದಿಯಾಗಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಭಾರತದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸುವ ಸಾಧ್ಯತೆಯಿದೆ ಎಂಬ ಊಹಾಪೋಹ ಹರಡಿದೆ.
ಕಾನೂನು ವಿಭಾಗದ ಸಲಹೆಯೊಂದಿಗೆ ಐಸಿಸಿಗೆ ಇ-ಮೇಲ್ ಕಳುಹಿಸಲಾಗುವುದು. ಇದರಲ್ಲಿ ಮಂಡಳಿಯು ಭಾರತೀಯ ಕ್ರಿಕೆಟ್ ಮಂಡಳಿಯ ನಿರ್ಧಾರದ ಬಗ್ಗೆ ಐಸಿಸಿಯಿಂದ ಸ್ಪಷ್ಟೀಕರಣಗಳನ್ನು ಬಯಸಿದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ.
2008ರಲ್ಲಿ ಮುಂಬೈ ಮಹಾನಗರದ ಮೇಲೆ ಭಯೋತ್ಪಾದಕರ ದಾಳಿ ನಡೆದ ನಂತರ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಉಭಯ ತಂಡಗಳು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಪರಸ್ಪರ ಸ್ಪರ್ಧಿಸುತ್ತಿವೆ.