ನಗದು ಪತ್ತೆ ಪ್ರಕರಣ : ಅಲಹಾಬಾದ್ ಹೈಕೋರ್ಟ್‌ಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆಗೆ ಕೇಂದ್ರ ಸರಕಾರ ಸಮ್ಮತಿ

ಯಶವಂತ್ ವರ್ಮಾ | PC : NDTV
ಹೊಸ ದಿಲ್ಲಿ: ತಮ್ಮ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಬಳಿಕ ವಿವಾದದ ಕೇಂದ್ರ ಬಿಂದುವಾಗಿರುವ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧಾರಕ್ಕೆ ಶುಕ್ರವಾರ ಕೇಂದ್ರ ಸರಕಾರ ಸಮ್ಮತಿ ಸೂಚಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ದಿಲ್ಲಿ, ಗುಜರಾತ್, ಕೇರಳ, ಕರ್ನಾಟಕ, ಲಕ್ನೊ ಹಾಗೂ ಪ್ರಯಾಗ್ ರಾಜ್ ಸೇರಿದಂತೆ ಆರು ರಾಜ್ಯಗಳ ಬಾರ್ ಅಸೋಸಿಯೇಷನ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧಾರಕ್ಕೆ ಕೇಂದ್ರ ಸರಕಾರ ಹಸಿರು ನಿಶಾನೆ ತೋರಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ರಾಷ್ಟ್ರಪತಿಗಳು ದಿಲ್ಲಿಯ ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್ ನ ನ್ಯಾಯಾಧೀಶರನ್ನಾಗಿ ವರ್ಗಾಯಿಸಿದ್ದು, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಾಗಿ ಅಧಿಕಾರವನ್ನು ಸ್ವೀಕರಿಸುವಂತೆ ಅವರಿಗೆ ನಿರ್ದೇಶನ ನೀಡಲಾಗಿದೆ” ಎಂದು ಕೇಂದ್ರ ಕಾನೂನು ಸಚಿವಾಲಯ ಇಂದು ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ತಿಳಿಸಿದೆ.
ಆದರೆ, ಅಲಹಾಬಾದ್ ಹೈಕೋರ್ಟ್ ಅನ್ನು ಕಸದ ತೊಟ್ಟಿಯಂತೆ ಪರಿಗಣಿಸಲಾಗುತ್ತಿದೆ ಎಂದು ಆರೋಪಿಸಿ, ನ್ಯಾ. ಯಶವಂತ್ ವರ್ಮಾ ವರ್ಗಾವಣೆಯ ವಿರುದ್ಧ ಅಲಹಾಬಾದ್ ಹೈಕೋರ್ಟ್ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವಾರ ನ್ಯಾ. ಯಶ್ವಂತ್ ವರ್ಮಾರನ್ನು ವರ್ಗಾವಣೆಗೊಳಿಸುವ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್, ಅವರನ್ನು ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸುವುದಕ್ಕೂ, ಅವರ ನಿವಾಸದಲ್ಲಿ ನೋಟಿನ ಕಂತೆಗಳು ಪತ್ತೆಯಾಗಿರುವ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟೀಕರಣ ನೀಡಿತ್ತು.