ಚಾಂಪಿಯನ್ಸ್ ಟ್ರೋಫಿ ಗೆಲುವು: ಭಾರತ ತಂಡಕ್ಕೆ 58 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
Update: 2025-03-20 12:52 IST

Photo credit: X/@bcci
ಹೊಸದಿಲ್ಲಿ: ಇತ್ತೀಚೆಗೆ ದುಬೈನಲ್ಲಿ ಮುಕ್ತಾಯಗೊಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಯು 58 ಕೋಟಿ ರೂ. ಬಹುಮಾನ ಘೋಷಿಸಿದೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳ ಅಂತರದಿಂದ ಪರಾಭವಗೊಳಿಸಿದ್ದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ, ಮೂರನೆಯ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.
ಈ ಬಹುಮಾನದ ಮೊತ್ತವನ್ನು ತಂಡದ ಆಟಗಾರರು, ತರಬೇತಿ ಮತ್ತು ನೆರವು ಸಿಬ್ಬಂದಿಗಳು ಹಾಗೂ ಅಜಿತ್ ಅಗರ್ಕರ್ ನೇತೃತ್ವದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಸದಸ್ಯರಿಗೆ ಹಂಚಲಾಗುತ್ತದೆ. ಆದರೆ, ಯಾರ್ಯಾರಿಗೆ ಎಷ್ಟೆಷ್ಟು ಪ್ರಮಾಣದ ಬಹುಮಾನ ಮೊತ್ತವನ್ನು ವಿತರಿಸಲಾಗುತ್ತದೆ ಎಂಬ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿಲ್ಲ.