ಮುಹಮ್ಮದ್ ಶಮಿಗೆ ಮೂರು ವಿಕೆಟ್, ಕ್ವಾರ್ಟರ್ ಫೈನಲ್ ತಲುಪಿದ ಬಂಗಾಳ
ರಾಜ್‌ಕೋಟ್ : ನಿರಂಜನ್ ಶಾ ಕ್ರೀಡಾಂಗಣದಲ್ಲಿ ಗುರುವಾರ ಆಡಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ರಾಜಸ್ಥಾನ ಕ್ರಿಕೆಟ್ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿರುವ ಬಂಗಾಳ ತಂಡವು ಎ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿದೆ. ಈ ಮೂಲಕ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20 ಪಂದ್ಯಾವಳಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ.
ಗೆಲ್ಲಲು 154 ರನ್ ಬೆನ್ನಟ್ಟಿದ ಬಂಗಾಳ ತಂಡವು ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ (78 ರನ್, 48 ಎಸೆತ, 7 ಬೌಂಡರಿ, 4 ಸಿಕ್ಸರ್)ಹಾಗೂ ನಾಯಕ ಸುದೀಪ್ ಕುಮಾರ್ (ಔಟಾಗದೆ 50, 45 ಎಸೆತ, 4 ಬೌಂಡರಿ, 1 ಸಿಕ್ಸರ್) ಅರ್ಧಶತಕದ ಕೊಡುಗೆ ನೆರವಿನಿಂದ 18.3 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.
ಇದಕ್ಕೂ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 153 ರನ್ ಗಳಿಸಲಷ್ಟೇ ಶಕ್ತವಾಯಿತು.
ಬಂಗಾಳದ ಪರ ಹಿರಿಯ ವೇಗದ ಬೌಲರ್ ಮುಹಮ್ಮದ್ ಶಮಿ(3-26)ಮೂರು ವಿಕೆಟ್‌ಗಳನ್ನು ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಶಹಬಾಝ್ ಅಹ್ಮದ್(2-21) ಹಾಗೂ ಸಯಾನಬ್ ಘೋಷ್(2-27)ತಲಾ ಎರಡು ವಿಕೆಟ್‌ಗಳನ್ನು ಪಡೆದರು.
ಕಾರ್ತಿಕ್ ಶರ್ಮಾ(46 ರನ್, 29 ಎಸೆತ)ಗರಿಷ್ಠ ಸ್ಕೋರರ್ ಎನಿಸಿಕೊಂಡರು. ನಾಯಕ ಮಹಿಪಾಲ್ ಲಾಮ್ರೋರ್(45 ರನ್, 37 ಎಸೆತ)ಎರಡಂಕೆಯ ಸ್ಕೋರ್ ಗಳಿಸಿದರು.