ಸಿಎಂ, ಡಿಸಿಎಂ ಸಹಿತ ಪ್ರಮುಖ ಸಚಿವರಿಗೆ ವರಿಷ್ಠರ ಬುಲಾವ್

Update: 2023-07-31 18:26 GMT

ಬೆಂಗಳೂರು: ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಹೊಸಬರಿಗೆ ಜವಾಬ್ದಾರಿ ನೀಡುವುದು, ಸರಕಾರದ ‘ಗ್ಯಾರಂಟಿ ಯೋಜನೆ’ಗಳಿಗೆ ಜನರ ಸ್ಪಂದನೆ ಸೇರಿದಂತೆ ಇನ್ನಿತರ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಲು ಹೈಕಮಾಂಡ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರಿಗೆ ದಿಲ್ಲಿಗೆ ಬರುವಂತೆ ಸೂಚನೆ ನೀಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಹಿರಿಯ ನಾಯಕರ ಜೊತೆಗೆ ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ಇತರ ನಾಯಕರು ಆ.2ರ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಿದ್ದಾರೆ. ಆ ಬಳಿಕ ಸಂಜೆ 5.30ರ ಸುಮಾರಿಗೆ ಸಚಿವರೊಂದಿಗೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆಂದು ಗೊತ್ತಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಲೋಕಸಭಾ ಚುನಾವಣೆಯವರೆಗೆ ಮುಂದುವರಿಸಲಾಗಿದೆ. ಆದರೆ, ಈ ಮಧ್ಯೆ ಕಾರ್ಯಾಧ್ಯಕ್ಷರಾಗಿದ್ದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದಾರೆ. ಇನ್ನೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸಲೀಂ ಅಹ್ಮದ್ ಪರಿಷತ್‍ನಲ್ಲಿ ಸರಕಾರದ ಮುಖ್ಯ ಸಚೇತಕರಾಗಿದ್ದು, ಅವರ ಸ್ಥಾನಗಳಿಗೆ ಹೊಸಬರ ನೇಮಕ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಸಾಧಿಸುವ ನಿಟ್ಟಿನಲ್ಲಿ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಹೆಸರಿನಲ್ಲಿ ವೈರಲ್ ಆದ ಪತ್ರ, ಇತ್ತೀಚೆಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆಯೂ ಹೈಕಮಾಂಡ್‍ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಿಗಮ-ಮಂಡಳಿಗಳ ನೇಮಕ ಬಗ್ಗೆಯೂ ಚರ್ಚೆ: ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಿರಿಯ ಶಾಸಕರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ವಹಿಸುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಸರಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾದರೂ ಇನ್ನು ನಿಗಮ, ಮಂಡಳಿಗಳ ನೇಮಕಾತಿ ವಿಚಾರದಲ್ಲಿ ಕ್ರಮ ಕೈಗೊಳ್ಳದಿರುವುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಸುಮಾರು 20 ತಿಂಗಳುಗಳ ವರೆಗೆ ನಿಗಮ, ಮಂಡಳಿಗಳಿಗೆ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ಮಾಡಿರಲಿಲ್ಲ. ಇದೀಗ, ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವುದರಿಂದ ಶಾಸಕರ ಕೈಗೆ ಅಧಿಕಾರ ನೀಡುವುದು ಉತ್ತಮ ಎಂಬ ಅಭಿಪ್ರಾಯ ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರತಿಧ್ವನಿಸಿತ್ತು ಎನ್ನಲಾಗಿದೆ.

ಸಮನ್ವಯ ಸಮಿತಿ ರಚನೆ?: ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯ ಸಾಧಿಸಲು ಹಿರಿಯ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚನೆ ಮಾಡುವಂತೆಯೂ ಕೆಲವು ಶಾಸಕರು ಆಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಒಂದೇ ಪಕ್ಷದ ಸರಕಾರ ಅಧಿಕಾರದಲ್ಲಿರುವುದರಿಂದ ಸಮನ್ವಯ ಸಮಿತಿ ರಚನೆ ಮಾಡಿದರೆ ಜನತೆಗೆ ತಪ್ಪು ಸಂದೇಶ ಹೋಗಲಿದೆ ಎಂದು ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಹೊಸ ತಂಡ ರಚನೆ: ‘ನಾವು ಸಚಿವರಾದ ಹಿನ್ನೆಲೆಯಲ್ಲಿ ನಮ್ಮ ಸ್ಥಾನದಲ್ಲಿ ಬೇರೆಯವರ ನೇಮಕ ಆಗಬೇಕು. ಈ ಕುರಿತಾಗಿ ನಾವು ಮನವಿ ಮಾಡಿದ್ದೇವೆ. ಅವಧಿ ಪೂರ್ತಿ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಬೇಕು. ಕೆಪಿಸಿಸಿಗೆ ಹೊಸ ತಂಡ ರಚನೆ ಮಾಡುವ ಬಗ್ಗೆಯೂ ಚರ್ಚೆ ಆಗಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ನಾಯಕರಿಗೆ ಜವಾಬ್ದಾರಿ ನೀಡಬೇಕಾಗಿದೆ. ಅಭ್ಯರ್ಥಿಗಳ ಆಯ್ಕೆ ಹೇಗಿರಬೇಕೆಂಬ ವಿಚಾರವಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು. ಇದಕ್ಕಾಗಿ ಕೆಲವು ಸಲಹೆ-ಸೂಚನೆ ನೀಡಲು ವರಿಷ್ಠರು ದಿಲ್ಲಿಯಲ್ಲಿ ಸಭೆ ಕರೆದಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ನಗರಕ್ಕೆ ಬಂದಾಗ ಸಭೆ ನಡೆಸಬೇಕಿತ್ತು. ಆ ದಿನ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ನಿಧನ ಹೊಂದಿದರು. ಹೀಗಾಗಿ ಆ ಸಭೆ ರದ್ದಾಗಿತ್ತು’
-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News