ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಸಿದ್ದರಾಮಯ್ಯ ಯತ್ನ; 6 ಜಿಲ್ಲೆಗಳ ಸಚಿವರು, ಶಾಸಕರೊಂದಿಗೆ ಸಮಾಲೋಚನೆ

Update: 2023-08-07 16:11 GMT

ಬೆಂಗಳೂರು, ಆ.7: ಆಡಳಿತರೂಢ ಕಾಂಗ್ರೆಸ್ ಪಕ್ಷದ ಶಾಸಕರಲ್ಲಿನ ಅಸಮಾಧಾನ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸೋಮವಾರ ಆರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸ್ಥಳೀಯವಾಗಿ ಶಾಸಕರು ಹಾಗೂ ಸಚಿವರ ನಡುವಿನ ಅಸಮಾಧಾನಗಳನ್ನು ಒಂದೊಂದಾಗಿ ಪರಿಹರಿಸಲು ಒತ್ತು ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವಂತೆ ಸೂಚಿಸಲಾಯಿತು.  

ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಮಟ್ಟದಲ್ಲೆ ಶಾಸಕರ ಪ್ರತ್ಯೇಕ ಸಭೆಗಳನ್ನು ಕರೆದು, ಸ್ಥಳೀಯವಾಗಿರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬಹಿರಂಗವಾಗಿ ಅಸಮಾಧಾನ, ಭಿನ್ನಮತ ವ್ಯಕ್ತಪಡಿಸುವಂತಿರಬಾರದು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಕಲಿ ಪತ್ರವೊಂದು ಯಾವ ರೀತಿ ಸರಕಾರ ಹಾಗೂ ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡಿತು ಎಂಬುದನ್ನು ಯಾವುದೆ ಕಾರಣಕ್ಕೂ ಮರೆಯಬೇಡಿ. ಜನರು ಬಹಳಷ್ಟು ವಿಶ್ವಾಸವಿಟ್ಟು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ವಿಶ್ವಾಸವನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ತಾವೆಲ್ಲರೂ ಬಯಸಿದಂತೆ ಜಿಲ್ಲಾವಾರು ಶಾಸಕರು, ಸಚಿವರ ಸಭೆಗಳನ್ನು ನಡೆಸುತ್ತಿದ್ದೇವೆ. ಮುಂದಿನ ಲೋಕಸಭಾ ಚುನಾವಣೆ ನಮ್ಮ ಪಾಲಿಗೆ ಪ್ರಮುಖವಾಗಿದೆ. ಕಾಂಗ್ರೆಸ್ ವರಿಷ್ಠರು ನಮ್ಮ ರಾಜ್ಯದ ಮೇಲೆ ಬಹಳಷ್ಟು ವಿಶ್ವಾಸ ಇರಿಸಿಕೊಂಡಿದ್ದಾರೆ. ನಮ್ಮಲ್ಲಿನ ಸಣ್ಣಪುಟ್ಟ ಅಸಮಾಧಾನಗಳು ವಿರೋಧ ಪಕ್ಷಗಳಿಗೆ ಆಹಾರವಾಗುವುದು ಬೇಡ. ಏನೆ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಹಾಗೂ ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಬಗೆಹರಿಸಿಕೊಳ್ಳಿ ಎಂದು ಶಾಸಕರಿಗೆ ಮುಖ್ಯಮಂತ್ರಿ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ಗ್ಯಾರಂಟಿಗಳ ಅನುಷ್ಠಾನದಿಂದಾಗಿ ಈ ವರ್ಷ ಯಾವ ಶಾಸಕರ ಕ್ಷೇತ್ರಗಳಿಗೂ ವಿಶೇಷ ಅನುದಾನ ನೀಡಲು ಆಗುತ್ತಿಲ್ಲ. ವರ್ಗಾವಣೆ ಸೇರಿದಂತೆ ಇನ್ನಿತರ ವಿಷಯಗಳಿಗೆ ಉಸ್ತುವಾರಿ ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಕನಿಷ್ಠ 20 ಸ್ಥಾನಗಳನ್ನಾದರೂ ರಾಜ್ಯದಿಂದ ಗೆಲ್ಲಬೇಕಿದೆ. ಅದಕ್ಕಾಗಿ, ಈಗಿನಿಂದಲೆ ಸಿದ್ಧತೆ ಆರಂಭಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಇಂದು ಬೆಳಗ್ಗೆ ತುಮಕೂರು, ಯಾದಗಿರಿ, ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಸಂಜೆ 4 ಗಂಟೆಯಿಂದ ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದರು.



Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News