ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣಗಳ ಮಾಹಿತಿ ನೀಡಿದವರಿಗೆ 1ಲಕ್ಷ ರೂ.ಬಹುಮಾನ
ಬೆಂಗಳೂರು : ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಗಳ ಮಾಹಿತಿಯನ್ನು ಸರಕಾರಕ್ಕೆ ನೀಡಿದವರಿಗೆ ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ಒಂದು ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.
ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ನೂತನ ಯೋಜನೆಯನ್ನು ರೂಪಿಸಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ನೀಡಲಾಗುತ್ತದೆ.
ಪ್ರಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು(ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಯಶ್ವಸಿಗೊಂಡ ಗುಪ್ತಕಾರ್ಯಾಚರಣೆಗೆ, ಮಾಹಿತಿ ನೀಡುವ ಮಾಹಿತಿದಾರರಿಗೆ ಈಗಾಗಲೇ 50 ಸಾವಿರ ರೂ.ಬಹುಮಾನವಾಗಿ ನೀಡಲಾಗುತ್ತಿತ್ತು.