254 ಹೊಸ ʼನಮ್ಮ ಕ್ಲಿನಿಕ್ʼ ಆರಂಭ | ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು: ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನು ಪ್ರಾರಂಭಿಸಲು 15 ದಿನಗಳ ಒಳಗಾಗಿ ಸ್ಥಳ ಗುರುತಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಗುರುವಾರ ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡಬೇಕು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನು ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಸಚಿವ ಸಂಪುಟ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಎನ್.ಎಚ್.ಎಮ್ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ದಿನೇಶ್ ಗುಂಡೂರಾವ್ ಸೂಚಿಸಿದರು.
15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನು ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚಿಸಿದರು.