ಜ.28ಕ್ಕೆ ಚಿತ್ರದುರ್ಗದಲ್ಲಿ ‘ಶೋಷಿತರ ಜಾಗೃತಿ’ಗಾಗಿ ಸಮಾವೇಶ: ಮಾವಳ್ಳಿ ಶಂಕರ್
ಬೆಂಗಳೂರು: ರಾಜ್ಯದಲ್ಲಿನ ಶೋಷಿತ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ಜ.28ರ ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.
ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶದಲ್ಲಿ ಎಚ್.ಕಾಂತರಾಜು ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಟ್ಟು ವರದಿಯನ್ನು ಅಂಗೀಕರಿಸಬೇಕು ಎಂದು ಹಕ್ಕೋತ್ತಾಯ ಮಾಡಲಾಗುವುದು’ ಎಂದರು.
ಅಲ್ಲದೆ, ಕೇಂದ್ರ ಸರಕಾರವು ದೇಶ ವ್ಯಾಪಿ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಬೇಕು. ಕೇಂದ್ರ ಸರಕಾರ ಜಾರಿಗೊಳಿಸಿರುವ ಆರ್ಥಿಕ ಆಧಾರದ ಶೇ.10(ಇಡಬ್ಲ್ಯುಎಸ್)ರಷ್ಟು ಮೀಸಲಾತಿಯನ್ನು ರದ್ದುಪಡಿಸಬೇಕು. ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದ ಅಭ್ಯರ್ಥಿಗಳ ಆದಾಯದ ಮಿತಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೆ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಬೇಕು. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ರಾಜಕೀಯ ಮೀಸಲಾತಿಯನ್ನು ನೀಡುವ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಮಾವಳ್ಳಿ ಶಂಕರ್ ತಿಳಿಸಿದರು.
ಎಸ್ಸಿ, ಎಸ್ಟಿ, ಒಬಿಸಿಗಳ ಜನಸಂಖ್ಯೆಗೆ ಅನುಗುಣವಾಗಿ ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು. ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಮುಸ್ಲಿಮ್ ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಬಲೀಕರಣಕ್ಕಾಗಿ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾ.ರಾಜಿಂದರ್ ಸಾಚಾರ್ ಸಲ್ಲಿಸಿರುವ ವರದಿಯನ್ನು ಕೂಡಲೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಸಿಖ್, ಬೌದ್ಧ ಮತ್ತು ಜೈನರಿಗೆ ಸಂವಿಧಾನ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು. ಈ ಸಮುದಾಯಗಳ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಸರಕಾರದ ನಿಗಮ, ಮಂಡಳಿ ಮತ್ತು ಅಭಿವೃದ್ಧಿ ಪ್ರಾಧಿಕಾರಿಗಳ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯದ ನೀತಿಯನ್ನು ಅಳವಡಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯಸಭೆ ಹಾಗೂ ವಿಧಾನ ಪರಿಷತ್, ಸಹಕಾರಿ ರಂಗಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ರಾಜಕೀಯ ಮೀಸಲಾತಿಯನ್ನು ನೀಡಬೇಕು ಎಂದು ಸಮಾವೇಶದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಶೋಷಿತ ಸಮುದಾಯಗಳ ಜನಪ್ರತಿನಿಧಿಗಳ ಎದುರು ನಮ್ಮ ಹಕ್ಕೋತ್ತಾಯಗಳನ್ನು ಮಂಡನೆ ಮಾಡುತ್ತೇವೆ ಎಂದು ಮಾವಳ್ಳಿ ಶಂಕರ್ ಹೇಳಿದರು.
ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಮಾತನಾಡಿ, ಹಿಂದುಳಿದ ವರ್ಗಗಳಲ್ಲಿ 200ಕ್ಕಿಂತ ಹೆಚ್ಚು ಜಾತಿ, ಉಪ ಜಾತಿಗಳಿವೆ, ಎಸ್ಸಿಯಲ್ಲಿ 101, ಎಸ್ಟಿಯಲ್ಲಿ 51 ಜಾತಿ ಉಪ ಜಾತಿಗಳಿವೆ. ನಮಗೆ ಸಿಗಬೇಕಿರುವ ಸವಲತ್ತುಗಳು ಯಾವುದು ಎಂಬುದರ ಬಗ್ಗೆಯೂ ಶೋಷಿತರಿಗೆ ಮಾಹಿತಿ ಇಲ್ಲ. ಶೋಷಿತ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು ಎಂದರು.
ಕಾಂತರಾಜು ಆಯೋಗದ ವರದಿಯ ವಿರುದ್ಧ ಅಪಸ್ವರ ಎತ್ತುತ್ತಿರುವ ಬಲಾಢ್ಯ ಸಮುದಾಯಗಳ ಧೋರಣೆ ಖಂಡನೀಯ. ವರದಿಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಆದರೂ, ಅದನ್ನು ಬಿಡುಗಡೆ ಮಾಡಲು ವಿರೋಧಿಸುವುದು ಸರಿಯಲ್ಲ. ರಾಜ್ಯದಲ್ಲಿ ನಾವು ಶೇ.70ರಷ್ಟು ಮಂದಿ ಇದ್ದೇವೆ. ನಮ್ಮ ಆಗ್ರಹ ವರದಿಯನ್ನು ಸರಕಾರ ಸ್ವೀಕರಿಸಿ ಬಿಡುಗಡೆ ಮಾಡಬೇಕು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕರಾದ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಅನಂತನಾಯಕ್, ಅಬ್ದುಲ್ ಮನ್ನಾನ್ ಸೇಠ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಖಾಲೀದ್ ಅಹ್ಮದ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.