ಸೌಜನ್ಯ ಕೊಲೆ ಪ್ರಕರಣ | ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನ

Update: 2023-08-31 17:10 GMT

ಬೆಂಗಳೂರು, ಆ.31: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಉಜಿರೆಯ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದ ರೀತಿ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಕುರಿತಂತೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಈ ಸೂಚನೆ ನೀಡಿದೆ. 

ಅಲ್ಲದೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಎಸ್ಪಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು, ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೋಟಿಸ್ ಜಾರಿಗೊಳಿಸಿತು. ಜೊತೆಗೆ, ಅಧೀನ ನ್ಯಾಯಾಲಯದ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ನಿರ್ದೇಶನ ನೀಡಿತು.

ಇದೇ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡಬಾರದು ಎಂದು ಮೌಖಿಕ ಎಚ್ಚರಿಕೆಯನ್ನೂ ನೀಡಿದೆ.

ಪ್ರಕರಣವೇನು?: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಸಂಬಂಧ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ನ್ಯಾಯಾಂಗ ಮತ್ತು ಧರ್ಮಸ್ಥಳ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉಜಿರೆಯ ಮಹೇಶ್ ತಿಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಲಾಗಿದೆ.

2012ರಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಬೆಂಬಲಿಗರು ಧರ್ಮಸ್ಥಳದ ಸಂಸ್ಥೆ, ಟ್ರಸ್ಟ್ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪೊಲೀಸ್ ಇಲಾಖೆಯ ಬಗ್ಗೆಯೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ.

ಜೊತೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಪೊಲೀಸ್ ಇಲಾಖೆಗೆ 2023ರ ಆಗಸ್ಟ್ 5ರಂದು ಮನವಿ ನೀಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಅಧೀನ ನ್ಯಾಯಾಲಯ ಮಾಡಿರುವ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು ಮತ್ತು ಪ್ರಕರಣವನ್ನು ಸೂಕ್ತ ತನಿಖಾ ಸಂಸ್ಥೆಗೆ ವಹಿಸಿ ನ್ಯಾಯ ಒದಗಿಸಲು ಕೋರಲಾಗಿದೆ. ಈ ನಿಟ್ಟಿನಲ್ಲಿ ಸರಕಾರ ಹಾಗೂ ಇತರೆ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News