ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರ ಬರೆದು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾಳೆ.
ರಾಜ್ಯ ಸರಕಾರದ ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸರಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಬರೆದ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ʼʼಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತುʼʼ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿ ಪತ್ರದಲ್ಲಿ ಹೀಗಿದೆ....
ʼʼ2ನೇ ಬಾರಿಗೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ತಮ್ಮನ್ನು ಅಭಿನಂದಿಸುತ್ತೇನೆ. ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ದೊರಕಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ಮೊಟ್ಟೆ, ಹಾಲು ವಿತರಣೆ ಯೋಜನೆ ಅತ್ಯುತ್ತಮ ಯೋಜನೆಯಾಗಿದೆ. ಅಲ್ಲದೇ, ತಾವು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುತ್ತೀರಿ ಎಂದು ಆಶಿಸುತ್ತಾ ತಮ್ಮಲ್ಲಿ ವಿಶೇಷವಾಗಿ ವಿನಂತಿಸುವುದೇನೆಂದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ತಾವು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕುʼʼ ಎಂದು ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾಳೆ.
ಸಿಎಂ ಪ್ರತಿಕ್ರಿಯೆ ಏನು?
ʼʼನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ʼʼಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆʼʼ ಎಂದು ಅವರು ಟ್ವಿಟರ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.