ಆದಿವಾಸಿ ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ
ಬೆಂಗಳೂರು : ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಆದಿವಾಸಿ ಬುಡಕಟ್ಟು ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇದೇ ಮೊದಲ ಬಾರಿಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಎರಡು ತಿಂಗಳ ಬಳಿಕ ಮತ್ತೊಂದು ಸಭೆ ನಡೆಸಲಾಗುವುದು. ಇಂದಿನ ಸಭೆಯಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಜಾರಿಗೆ ತರಬೇಕು. ಇಲ್ಲದಿದ್ದರೆ, ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು ಎಂದು ಅವರು ತಿಳಿಸಿದರು.
ಪಡಿತರ ಚೀಟಿ ಹೊಂದಿಲ್ಲದ ಬುಡಕಟ್ಟು ಕುಟುಂಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸಬೇಕು. ಅರಣ್ಯ ಹಕ್ಕು ಸಮಿತಿಗಳ ಮುಂದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಬುಡಕಟ್ಟು ಸಮುದಾಯದವರಿಗೆ ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು. ಬುಡಕಟ್ಟು ಸಮುದಾಯ ಕಲ್ಪಿಸುವ ವಿಷಯದಲ್ಲಿ ಕಂದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಸಂಪರ್ಕ ರಸ್ತೆಗಳ ದುರಸ್ತಿ, ಉನ್ನತೀಕರಣಕ್ಕೆ ರಾಜ್ಯ ಸರಕಾರದ ಹಂತದಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಎರಡು ತಿಂಗಳ ಒಳಗಾಗಿ ಮತ್ತೆ ಸಭೆ ಕರೆದು ಈ ಎಲ್ಲ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅದರ ಒಳಗಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.
ಮನೆ ನಿರ್ಮಾಣ:
ನಿವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಗುರುತಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ ಮುಖ್ಯಮಂತ್ರಿ, ನಿವೇಶನ ಇದ್ದರೂ ಮನೆಯಿಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ 2963 ಕುಟುಂಬಗಳಿಗೆ ನಿವೇಶನ ಇಲ್ಲ. 1222 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ 5164 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 234 ಕುಟುಂಬಗಳಿಗೆ ನಿವೇಶನ ಇಲ್ಲ. 2761 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇಲ್ಲ. ಕೊಡಗು ಜಿಲ್ಲೆಯಲ್ಲಿ 2882 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 1050 ಕುಟುಂಬಗಳಿಗೆ ನಿವೇಶನ ಇಲ್ಲ. 1182 ಕುಟುಂಬಗಳಿಗೆ ನಿವೇಶನ ಇದ್ದರೂ ಮನೆ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ವಿದ್ಯುತ್ ಸಂಪರ್ಕ:
ಮೈಸೂರು ಜಿಲ್ಲೆಯಲ್ಲಿ 194 ಹಾಡಿಗಳು ಅರಣ್ಯದಂಚಿನಲ್ಲಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 21 ಹಾಡಿಗಳ ಪೈಕಿ ಮೂರು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, 18 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ. 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ ಎಲ್ಲ 125 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 33 ಹಾಡಿಗಳ ಪೈಕಿ 15 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದಿರುವ 18 ಹಾಡಿಗಳಿಗೆ ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ನುಡಿದರು.
ಕೊಡುಗು ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ 211 ಹಾಡಿಗಳ ಪೈಕಿ 154 ಹಾಡಿಗಳಿಗೆ ಹಾಗೂ ಅರಣ್ಯದೊಳಗಿರುವ 74 ಹಾಡಿಗಳ ಪೈಕಿ 57 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 17 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ. 5 ಹಾಡಿಗಳಿಗೆ ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿಯಿರುವ ಪ್ರಸ್ತಾವನೆಗಳಿಗೆ ಶೀಘ್ರ ಅನುಮತಿ ನೀಡಿ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಮೈಸೂರು ಜಿಲ್ಲೆಯಲ್ಲಿ 215 ಹಾಡಿಗಳಿದ್ದು, 49,778 ಜನರು ವಾಸಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 158 ಹಾಡಿಗಳಿದ್ದು, 27,763 ಜನರು ವಾಸಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ 228 ಹಾಡಿಗಳಿದ್ದು, 26,909 ಮಂದಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹಕ್ಕುಪತ್ರ ವಿತರಣೆ:
ಬುಡಕಟ್ಟು ಜನರಿಗೆ ಹಕ್ಕುಪತ್ರ ವಿತರಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಹಕ್ಕುಪತ್ರ ಹೊಂದಿದವರು ಸರಕಾರದ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅರ್ಹತೆ ಪಡೆಯುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳಿಗೆ ವೈಯಕ್ತಿಕ ಹಕ್ಕುಪತ್ರಕ್ಕಾಗಿ 12,222 ಅರ್ಜಿ ಸ್ವೀಕರಿಸಲಾಗಿದ್ದು, 4,856 ಹಕ್ಕುಪತ್ರಗಳನ್ನು ವಿತರಿಸಲಾಗಿದೆ. 6,363 ಎಕರೆ ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 6,808 ಅರ್ಜಿಗಳು ತಿರಸ್ಕೃತಗೊಂಡಿದ್ದು, ವಿಲೇವಾರಿ ಮಾಡಲು ಬಾಕಿಯಿರುವ 558 ಅರ್ಜಿಗಳನ್ನು ಪರಿಶೀಲಿಸಿ ಆದಷ್ಟು ಬೇಗನೆ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಇತರ ಪಾರಂಪರಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರಕ್ಕಾಗಿ 1,626 ಅರ್ಜಿ ಸ್ವೀಕರಿಸಲಾಗಿದ್ದು, 531 ಹಕ್ಕುಪತ್ರ ವಿತರಿಸಿ 104 ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 1,095 ಅರ್ಜಿಗಳು ತಿರಸ್ಕೃತಗೊಂಡಿವೆ. ಅರಣ್ಯ ಹಕ್ಕು ಕಾಯ್ದೆಯಡಿ ಸಮುದಾಯದ ಹಕ್ಕುಪತ್ರಕ್ಕಾಗಿ 260 ಅರ್ಜಿ ಸ್ವೀಕರಿಸಲಾಗಿದ್ದು, 160 ಹಕ್ಕುಪತ್ರ ವಿತರಿಸಿ 38,117 ಎಕರೆ ವಿಸ್ತೀರ್ಣದ ಪ್ರದೇಶ ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಐಎಎಸ್ ಅಧಿಕಾರಿಗಳಾದ ಮಂಜುನಾಥ ಪ್ರಸಾದ್, ಅಂಜುಮ್ ಪರ್ವೇಝ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.