ಕೆಎಸ್ಸಾರ್ಟಿಸಿಗೆ ಉತ್ತರ ಪ್ರದೇಶದ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಭೇಟಿ
ಬೆಂಗಳೂರು, ಸೆ. 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಸಂಸ್ಥೆಗೆ ಭೇಟಿ ನೀಡಿದ್ದು, ಈ ವೇಳೆ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4, ಪ್ರಾದೇಶಿಕ ಕಾರ್ಯಾಗಾರ, ಕೆಂಗೇರಿ, ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಸ್ಯಾಟ್‍ಲೈಟ್ ಬಸ್ ನಿಲ್ದಾಣದ ನಿಯಂತ್ರಣ ಕೊಠಡಿಗಳಿಗೆ ಭೇಟಿ ಪರಿಶೀಲನೆ ನಡೆಸಿತು.
ಈ ಭೇಟಿಯ ಸಂದರ್ಭದಲ್ಲಿ ವಾಹನಗಳ ತಾಂತ್ರಿಕ ನಿರ್ವಹಣೆ ಮತ್ತು ಕಾರ್ಯಾಚರಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಬಸ್ ನಿಲ್ದಾಣ/ ಘಟಕಗಳ ಕಾಮಗಾರಿ ಪದ್ಧತಿ, ಬಸ್ಸುಗಳ ಬ್ರ್ಯಾಂಡಿಂಗ್, ಬಸ್ಸುಗಳ ಪುನಶ್ವೇತನ ಕಾರ್ಯ, ಬಸ್ ನಿಲ್ದಾಣದ ಸ್ವಚ್ಛತೆ ಬಗ್ಗೆ ಮಾಹಿತಿ ಪಡೆದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರನ್ನು ಯುಪಿ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕಿ ಅನ್ನಪೂರ್ಣ ಗರ್ಗ್ ಅವರು ಕೇಂದ್ರ ಕಚೇರಿಯಲ್ಲಿ ಭೇಟಿಯಾಗಿ ನಿಗಮದ ಸಮಗ್ರ ಉಪಕ್ರಮಗಳ ಮಾಹಿತಿ ಪಡೆದರು. ಈ ವೇಳೆ ನಿರ್ದೇಶಕ ಸುಂದರೇಶ್ ಬಾಬು ಎಂ. ಉಪಸ್ಥಿತರಿದ್ದರು.
ಮುಖ್ಯ ಪ್ರಧಾನ ವ್ಯವಸ್ಥಾಪಕ(ತಾಂತ್ರಿಕ) ಆರ್.ಎನ್.ವರ್ಮ, ಸಲಹೆಗಾರ(ಕಾರ್ಯಾಚರಣೆ) ಅತುಲ್ ಜೈನ್ ಹಾಗೂ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.