ಪಂಡಿತ್ ರಾಜೀವ್ ತಾರಾನಾಥ್ ಅವರ ಬಳಿ ಕಮಿಷನ್ ಕೇಳಿದ ಆರೋಪ: ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಎಚ್.ಸಿ. ಮಹದೇವಪ್ಪ ಸೂಚನೆ
ಮೈಸೂರು: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಿದ್ದೇನೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶನಿವಾರ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಂಡಿತ್ ರಾಜೀವ್ ತಾರಾನಾಥ್ ಅವರ ಆರೋಪ ಏನು?
ʼʼದಸರಾ ಉತ್ಸವದಲ್ಲಿ ತಮಗೆ ನೀಡುವ ಸಂಭಾವನೆಯಲ್ಲಿ ಮೂರು ಲಕ್ಷ ರೂಪಾಯಿ ಕಮಿಷನ್ ಕೇಳಲಾಯಿತು. ಹೀಗೆ ಕಮೀಷನ್ ಕೇಳಿದವರಿಗೆ ಛೀಮಾರಿ ಹಾಕಿದ್ದೇನೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ. ಇಂತಹ ಕಮಿಷನ್ ವ್ಯವಹಾರವನ್ನು ಪ್ರೋತ್ಸಾಹಿಸುವುದಿಲ್ಲʼʼ ಎಂದು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿದ್ದಾರೆ.