ದರ್ಶನ್‍ಗೆ ರಾಜಾತಿಥ್ಯ ಆರೋಪ : ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರು 3 ದಿನ ಪೊಲೀಸ್ ವಶಕ್ಕೆ
ಬೆಂಗಳೂರು : ನಟ ದರ್ಶನ್ ಹಾಗೂ ಇನ್ನಿತರ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಕಲ್ಪಿಸಿದ ಆರೋಪ ಸಂಬಂಧ ವಿಚಾರಣಾಧೀನ ಕೈದಿಗಳಾಗಿರುವ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ಎಂಬುವರನ್ನು 9ನೇ ಎಸಿಎಂಎಂ ನ್ಯಾಯಾಲಯ ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿರುವುದಾಗಿ ವರದಿಯಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಗುರುವಾರ ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯವು, ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲು ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ವಿಲ್ಸನ್ ಗಾರ್ಡನ್ ನಾಗ, ನಟ ದರ್ಶನ್, ಕುಳ್ಳ ಸೀನಾ ಹಾಗೂ ದರ್ಶನ್ ಸಹಚರ ನಾಗರಾಜು ಇರುವ ಫೋಟೋವನ್ನು ವಿಲ್ಸನ್ ಗಾರ್ಡನ್ ನಾಗನ ಸಹಚರ ವೇಲು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದ. ದರ್ಶನ್ ಒಂದು ಕೈನಲ್ಲಿ ಕಾಫಿ ಮಗ್, ಇನ್ನೊಂದು ಕೈಯಲ್ಲಿ ಸಿಗರೇಟು ಸೇವನೆ ಮಾಡುತ್ತಿರುವ ಫೋಟೋ ವೈರಲ್ ಆಗಿ, ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನ ಅಧೀಕ್ಷಕರು ಸೇರಿ 9ಕ್ಕಿಂತ ಹೆಚ್ಚು ಸಿಬ್ಬಂದಿ ಅಮಾನತಾಗಿದ್ದರು. ಬಳಿಕ ಕೋರ್ಟ್ ಆದೇಶದ ಮೇರೆಗೆ, ದರ್ಶನ್ ಹಾಗೂ ಇತರ ಆರೋಪಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು.