16ನೇ ʼಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವʼದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

Update: 2025-01-09 14:01 GMT

 ಕಿಶೋರ್‌ ಕುಮಾರ್‌

ಬೆಂಗಳೂರು: ಬಹುಬಾಷಾ ನಟ ಕಿಶೋರ್‌ ಕುಮಾರ್‌ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಕುರಿತು ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

16ನೇ ಬೆಂಗಳೂರು ಅಂತರ್‍ರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ, ಚಲನಚಿತ್ರೋತ್ಸವ ‘ಸರ್ವ ಜನಾಂಗದ ಶಾಂತಿಯ ತೋಟ’ ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

ಸಿಎಂ ಅಭಿನಂದನೆ:ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ನಟ ಕಿಶೋರ್ ಕುಮಾರ್ ಅವರಿಗೆ ಅಭಿನಂದನೆಗಳು. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News