ನರೇಗಾ ಕೂಲಿ ದಿನ 150ಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಮರು ಪ್ರಸ್ತಾವ: ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿ: ಬರ ಪರಿಸ್ಥಿತಿ ಇದ್ದು, ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ ದಿನಗಳನ್ನು 150 ದಿನಗಳಿಗೆ ಹೆಚ್ಚಿಸುವಂತೆ ಕೇಂದ್ರ ಸರಕಾರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗುರುವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೆ.ಎಂ.ಶಿವಲಿಂಗೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಕೂಲಿ ದಿನ ಹೆಚ್ಚಿಸಲು ಕೇಂದ್ರಕ್ಕೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೂ ಪರಿಗಣಿಸಲಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರದಿಂದ ಮರು ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಲಾಗುವುದು ಎಂದರು.
ಬರ ಪರಿಸ್ಥಿತಿಯನ್ನು ಘೋಷಿಸುವ ಪೂರ್ವದಿಂದಲೇ ಉದ್ಯೋಗ ಖಾತರಿ ಯೋಜನೆಯಡಿ ನೀಡುವ ಮಾನವ ದಿನಗಳನ್ನು 150ಕ್ಕೆ ಹೆಚ್ಚಿಸಲು ಸೆ.14 ರಿಂದ ಅ.19ರ ವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಆಯುಕ್ತರು, ಪ್ರಧಾನ ಕಾರ್ಯದರ್ಶಿ ಮತ್ತು ಸ್ವತಃ ನಾನು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದರು.
ಇದಕ್ಕೆ ಉತ್ತರವಾಗಿ ಅ.31 ರಂದು ಕೇಂದ್ರ ಸರಕಾರದಿಂದ ಮರು ಸಂದೇಶ ಬಂದಿದೆ. ಆದರೆ ನಿನ್ನೆ ಸಂಸತ್ ಕಲಾಪದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸುವ ಕುರಿತು ಯಾವುದೇ ಪ್ರಸ್ತಾವನೆ ಸ್ವೀಕೃತವಾಗಿಲ್ಲ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದರು.