ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜಕೀಯ ವಲಯದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ‘ಹನಿಟ್ರ್ಯಾಪ್’ ಮಾಡಲು ಯತ್ನಿಸಿದ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರವಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ತ್ವರಿತವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಉಪಸ್ಥಿತರಿದ್ದರು.
ಹನಿಟ್ರ್ಯಾಪ್ ವಿವಾದದ ಬೆನ್ನಲ್ಲೇ ಸ್ವತಃ ಮಲ್ಲಿಕಾರ್ಜುನ ಖರ್ಗೆಯವರೇ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಚರ್ಚೆಗೆ ಗ್ರಾಸವಾಗಿದೆ. ಹನಿಟ್ರ್ಯಾಪ್ ವಿಚಾರದ ಬಗ್ಗೆ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಖರ್ಗೆ ಹಾಗೂ ಸಿದ್ದರಾಮಯ್ಯ, ‘ಹನಿಟ್ರ್ಯಾಪ್’ ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ 45 ನಿಮಿಷಗಳಿಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ.