ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹೈಕಮಾಂಡ್ ತೀರ್ಮಾನ: ಸತೀಶ್ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಈ ವಿಚಾರ ನಮ್ಮ ಹಂತದಲ್ಲಿ ನಿರ್ಧಾರವಾಗುವಂತದ್ದಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬೊಬ್ಬರು ಎರಡು ಹುದ್ದೆಯಲ್ಲಿದ್ದರೆ ಜವಾಬ್ದಾರಿಯನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಆದುದರಿಂದ, ಈ ಸಂಬಂಧ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಎಲ್ಲರೂ ಚರ್ಚೆ ಮಾಡಿದ್ದೇವೆ. ಪಕ್ಷ ಸಂಘಟನೆಗೆ ಹೆಚ್ಚು ಸಮಯ ಮೀಸಲಿಡುವಂತಹ ವ್ಯಕ್ತಿಯ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಈ ಸ್ಥಾನಕ್ಕೆ ಮೃಣಾಲ್ ಹೆಬ್ಬಾಳ್ಕರ್ ಹೆಸರು ಚರ್ಚೆಗೆ ಬಂದಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ನಿಗಮ, ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರನ್ನು ನೇಮಕ ಮಾಡುವ ವಿಚಾರದಲ್ಲಿ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದಾರೆ. ಈಗಾಗಲೇ, ಶೇ.70ರಷ್ಟು ನೇಮಕಾತಿಗಳನ್ನು ಮಾಡಲಾಗಿದೆ. ಉಳಿದ ಹುದ್ದೆಗಳಿಗೂ ಶೀಘ್ರದಲ್ಲೆ ಅರ್ಹರನ್ನು ನೇಮಕ ಮಾಡುತ್ತಾರೆ ಎಂದು ಅವರು ಹೇಳಿದರು.
ರಾಜ್ಯ ಸರಕಾರ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದೆ. ಬಿಜೆಪಿಯವರು ಅನಾವಶ್ಯಕವಾಗಿ ಗೊಂದಲ ಮೂಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೆ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನಮ್ಮ ಸರಕಾರ ಜನಪರವಾಗಿ ಕೆಲಸ ಮಾಡಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ರಾಜ್ಯದಲ್ಲಿ ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಕಡೆ ಸೇತುವೆಗಳು ಹಾಳಾಗಿವೆ. ಅವುಗಳ ದುರಸ್ಥಿಗೆ ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ. ಬಜೆಟ್‍ನಲ್ಲಿ ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ 4 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.