ಕೋಲಾರದಲ್ಲಿ ಎಲ್ಲ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ: ಡಿ.ಕೆ. ಶಿವಕುಮಾರ್

Update: 2024-03-28 16:41 GMT

ಡಿ.ಕೆ. ಶಿವಕುಮಾರ್ (Photo:X/@DKShivakumar)

ಬೆಂಗಳೂರು: ಕೋಲಾರದಲ್ಲಿ ಎಲ್ಲ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದ ಸದಾಶಿವನಗರ ನಿವಾಸದ ಬಳಿ ಕೋಲಾರ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಪ್ರತಿಕ್ರಿಯಿಸಿ, ಡಿ.ಕೆ.ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡು ಬಂದಿದ್ದಾರೆ.ಕೋವಿಡ್ ಕಷ್ಟಕಾಲದಲ್ಲಿ ಡಿ.ಕೆ.ಸುರೇಶ್ ಅವರು ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು.ಸರಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ.ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು ಎಂದು ಅವರು ಹೇಳಿದರು.

ಎಲ್ಲ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೊಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯಿತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಪ್ರತಿಕ್ರ್ರಿಯಿಸಿದ ಡಿ.ಕೆ.ಶಿವಕುಮಾರ್, ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆ ಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಎಐಸಿಸಿ ಅಧ್ಯಕ್ಷ ಖರ್ಗೆಯವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ಹೊಸತಲ್ಲ..!

ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಡಿ.ಕೆ.ಸುರೇಶ್ ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News