ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
ಚಿಕ್ಕಮಗಳೂರು, ಆ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದ್ದು, ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ.
ಮೂಡಿಗೆರೆ ಪ್ರಜ್ವಲ್ ಎಂಬಾತ ಸಿದ್ದರಾಮಯ್ಯ ಅವರ ಹೆಸರು ಹಾಕಿ ತಿಥಿ ಕಾರ್ಡ್ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ಗಳನ್ನು ತನ್ನ ಫೇಸ್‍ಬುಕ್ ಖಾತೆ ಹಾಗೂ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದನು. ಅಲ್ಲದೇ ಈ ಅವಹೇಳನಕಾರಿ ಪೋಸ್ಟ್ ಗಳನ್ನು ಹಿಂದೂ ಸಾಮ್ರಾಜ್ಯ ಮೂಡಿಗೆರೆ ಎಂಬ ಫೇಸ್‍ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದ.
ಈ ಪೋಸ್ಟ್ ಗಳನ್ನು ಗಮನಿಸಿದ ಕಾಂಗ್ರೆಸ್ ಮುಖಂಡರು, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಈತನ ವಿರುದ್ಧ ಚಿಕ್ಕಮಗಳೂರು ನಗರದ ಸೆನ್ ಪೊಲೀಸ್ ಠಾಣೆಗೂ ದೂರು ನೀಡಿರುವ ಕಾಂಗ್ರೆಸ್ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರ ತಿಥಿ ಕಾರ್ಡ್‍ಗಳನ್ನು ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅವಹೇಳನ ಮಾಡಲಾಗಿದೆ. ಈ ಮೂಲಕ ಸಮಾಜ ಸ್ವಾಸ್ಥ್ಯ ಹಾಳು ಮಾಡಲು ಪ್ರಯತ್ನಿಸಲಾಗಿದೆ. ಆದ್ದರಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿರುವ ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖಂಡರು ದೂರಿನಲ್ಲಿ ಆಗ್ರಹಿಸಿದ್ದಾರೆ.