ಪ್ರಚೋದನಕಾರಿ ಹೇಳಿಕೆ ಆರೋಪ; ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾನೂನು ಕ್ರಮದ ಬಗ್ಗೆ ಮೈಸೂರು ನಗರ ಪೊಲೀಸ್‌ ಆಯುಕ್ತರು ಹೇಳಿದ್ದೇನು?

Update: 2023-10-12 12:37 GMT

ಮೈಸೂರು: ಮಹಿಷ ದಸರಾ ಆಚರಣೆ ಕುರಿತು ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆ ಕುರಿತು ಕೆಲವರು ದೂರುಗಳನ್ನು ನೀಡಿದ್ದಾರೆ. ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಬಂದ ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

ಮಹಿಷ ದಸರಾ ಆಚರಣೆ ಮತ್ತು ಚಲೋ ಚಾಮುಂಡಿ ಪರ ಕೆಲವರು ಸಾಮಾಜಿಕ ಜಾಲತಾಣ ಮತ್ತು ಇತರೆಡೆಗಳಲ್ಲಿ ಕಾನೂನಿಗೆ ವಿರುದ್ಧವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ನಾವು ಅವರ ಮೇಲೆ ನಿಗಾವಹಿಸಲಾಗಿದ್ದು, ನಮ್ಮ ಇಲಾಖೆಯ ಕಾನೂನು ತಜ್ಞರ ಅಭಿಪ್ರಾಯ ಕೇಳಿದ್ದೇವೆ. ಅವರು ಇಂದು ಸಂಜೆ ಅಥವಾ ನಾಳೆಯೊಳಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಲಿದ್ದಾರೆ. ಆವರ ಅಭಿಒ್ರಾಯ ಬಂದ ನಂತರ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಮೀಷನರ್ ರಮೇಶ್ ಬಾನೋತ್, ಎಲ್ಲಾ ವಿಚಾರಗಳ ಕುರಿತು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ. ಅವರಿಂದ ಏನು ಬರುತ್ತದೊ ಅದನ್ನು ನೋಡಿಕೊಂಡು ಮುಂದಿನ‌ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

ಒಟ್ಟಿನಲ್ಲಿ ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಯಾವ ಕ್ರಮಗಳನ್ನು ಕೈಗೊಳ್ಳಬೇಕೊ ಎಲ್ಲಾ ರೀತಿಯ ಕ್ರಮಗಳನ್ನು ಪೊಲೀಸ್ ಇಲಾಖೆ ವಹಿಸಲಿದೆ ಎಂದು ಮಾಹಿತಿ ನೀಡಿದರು.

ʼʼಸಂಘರ್ಷ ಮಾಡಿಯೇ ನಾವು ಪಕ್ಷ, ದೇಶ ಕಟ್ಟಿರುವುದು, ಸಂಘರ್ಷ ಮಾಡಿಯೇ ಮಹಿಷ ದಸರಾ ಆಚರಣೆ ಮಾಡಲು ಬರುವವರನ್ನು ತುಳಿದು ಹಾಕುತ್ತೇವೆʼʼ ಎಂದು ಇತ್ತೀಚೆಗೆ ಪ್ರತಾಪ್ ಸಿಂಹ ನಗರದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು. 

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News