ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ದೂರು
Update: 2023-08-15 15:50 GMT
ಬೆಂಗಳೂರು, ಆ.15: ಸಂದರ್ಶನವೊಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ವ್ಯಕ್ತಿಯೊಬ್ಬರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಬಗ್ಗೆ ವರದಿಯಾಗಿದೆ.
ಮರಿಯಪ್ಪನ ಪಾಳ್ಯದ ಎಸ್.ಎಂ.ದಿವಾಕರ್ ಎಂಬುವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‍ಸಿಆರ್) ದಾಖಲಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಖಾಸಗಿ ಚಾನೆಲ್‍ನ ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ‘ಊರನ್ನು ಹೊಲಗೇರಿ ಮಾಡಬೇಡಿ’ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಸಚಿವರು ಮಾತನಾಡಿರುವ ಸ್ಥಳ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಾಗಿದ್ದು, ಪ್ರಕರಣವನ್ನು ರಾಜಾಜಿನಗರ ಪೊಲೀಸರು ವಿಧಾನಸೌಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಗೊತ್ತಾಗಿದೆ.