ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ | ಎಚ್‌ಡಿಕೆ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

Update: 2024-11-06 15:32 GMT

ಎಡಿಜಿಪಿ ಚಂದ್ರಶೇಖರ್/ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮತ್ತು ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥರಾದ ಎಂ.ಚಂದ್ರಶೇಖರ್‌ ನೀಡಿರುವ ದೂರಿನ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಎಂ.ಚಂದ್ರಶೇಖರ್‌ ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸಂಬಂಧ ಸಂಜೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಯಾವುದಾದರು ಕ್ರಮಕ್ಕೆ ಮುಂದಾದಲ್ಲಿ ತಕ್ಷಣ ನ್ಯಾಯಪೀಠದ ಕದ ತಟ್ಟಬಹುದು ಎಂದು ಪೀಠ ಹೇಳಿದೆ.

ಜತೆಗೆ, ಅಕ್ರಮ ಗಣಗಾರಿಕೆ ಸಂಬಂಧ 10 ವರ್ಷಗಳ ಹಿಂದೆ ಮಂಜೂರಾದ ನಿರೀಕ್ಷಣಾ ಜಾಮೀನು ರದ್ದುಪಡಿಸುವ ಪ್ರಕ್ರಿಯೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದು ಪೀಠ ಮೌಖಿಕವಾಗಿ ತಿಳಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಹಸ್ಮತ್​ ಪಾಷ, ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಆದೇಶಿಸಿರುವುದರಿಂದ ನಮ್ಮ ಕಕ್ಷಿದಾರರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲಾಗುತ್ತಿದೆ. ಕಳೆದ ಹತ್ತು ವರ್ಷಗಳ ಹಿಂದೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದು ಕೋರಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News