ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಸಿಎ ನಿವೇಶನ ಮಂಜೂರು | ವಿವರಣೆ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ಪತ್ರ

Update: 2024-09-02 12:46 GMT

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ತರಾತುರಿಯಲ್ಲಿ ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯಿಂದ ನಾಗರಿಕ ಸೌಕರ್ಯ(ಸಿಎ) ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪ್ರಭಾವ ಬಳಸಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮೂಲಕ ತಮ್ಮ ಸಹೋದರ ರಾಹುಲ್ ಖರ್ಗೆಯವರ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ಇತ್ತೀಚೆಗೆ ದೂರು ಸಲ್ಲಿಸಿದ್ದರು.

ಇದೆಲ್ಲ ಆರೆಸ್ಸೆಸ್ ಹಾಗೂ ಬಿಜೆಪಿ ಸಂಚು :

ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಪಾಲರು ನಮ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಒಂದು, ಕಾಂಗ್ರೆಸ್ ಪಕ್ಷಕ್ಕೆ ಒಂದು ಸಂವಿಧಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯವರು ಮೊದಲು ನಮ್ಮ ವಿಚಾರದಲ್ಲಿ 10 ಆರೋಪ ಮಾಡುತ್ತಿದ್ದರು. ಎರಡನೆ ದಿನ ಐದು ಆರೋಪಗಳನ್ನು ಮಾಡಿದರು. ಈಗ ಯಾಕೋ ಸುಮ್ಮನಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ ಹೊರತುಪಡಿಸಿ ಬೇರೆ ಯಾರೂ ಈ ಸಿಎ ನಿವೇಶನ ವಿಚಾರ ಯಾಕೆ ಮಾಡುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಯಾಕೆ ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ಕಾನೂನು ಪ್ರಕಾರ ಎಲ್ಲವೂ ಸರಿಯಿದೆ ಎಂಬುದು ಅವರಿಗೆ ಗೊತ್ತಾಗಿದೆ. ದಲಿತರ ನಡುವೆ ಬಡಿದಾಡಿಸುವುದು, ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರೆಸ್ಸೆಸ್ ಹಾಗೂ ಬಿಜೆಪಿ ಸಂಚು ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News