ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು
ಬೆಂಗಳೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣದ ಕುರಿತು ಕೋರ್ಟ್ ವಿಚಾರಣೆಯಾಗಿ ತೀರ್ಪು ಪ್ರಕಟಿಸಲು ಬಾಕಿ ಇರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮೈಸೂರು ಮೂಲದ ಪಿ.ಎಸ್.ನಟರಾಜ ಎಂಬುವರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ನೀಡಲು ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಹೀಗಾಗಿ ಮುಖ್ಯ ಕಾರ್ಯದರ್ಶಿ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಕೇಳಿದ್ದಾರೆ.
ಆಗಸ್ಟ್ 27ರಂದು ನಟರಾಜ್ ಎಂಬುವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು. ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೌಖಿಕ ನಿರ್ದೇಶನದ ಅನ್ವಯ ಸಿಎಂ ಪ್ರತಿನಿಧಿಸುವ ಕ್ಷೇತ್ರ ವರುಣಾದಲ್ಲಿ ಮತ್ತು ಶ್ರೀರಂಗಪಟ್ಟಣ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ನಾಟಕ ನಗರಾಭಿವೃದ್ಧಿ ವಿಧೇಯಕ, 1987ರ ಸೆಕ್ಷನ್ 15 ಮತ್ತು 25ರ ವಿರುದ್ಧವಾಗಿ ಕಾಮಗಾರಿ ಕೈಗೊಳ್ಳಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 387 ಕೋಟಿಗಳ ಕಾಮಗಾರಿ ಗಳನ್ನು ನಿಯಮ ಬಾಹಿರವಾಗಿ ಕೈಗೊಂಡಿದೆ. ಪ್ರಾಧಿಕಾರದಲ್ಲಿ ಹಣವಿಲ್ಲದಿದ್ದರೂ ಸಿಎಂ ಸೂಚನೆಯ ಮೇರೆಗೆ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದಾಗಿ ಅಧಿಕಾರ ದುರುಪಯೋಗವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ಅಗತ್ಯವಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.