Bengaluru Bandh | ರಾತ್ರೋರಾತ್ರಿ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ: ಎಚ್.ಡಿ ಕುಮಾರಸ್ವಾಮಿ

Update: 2023-09-26 04:34 GMT

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಂ ಬೆಳಗ್ಗೆಯೇ ಪೊಲೀಸರು ಕಾರ್ಯನಿರತರಾಗಿದ್ದಾರೆ.

ಇನ್ನು ರೈತರು, ಹೋರಾಟಗಾರರನ್ನುರಾತ್ರೋರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು,  ʼʼಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?ʼʼ ಎಂದು ಪ್ರಶ್ನೆ ಮಾಡಿದ್ದಾರೆ. ‌

ʼʼಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ.ʼʼ ಎಂದು ಕಿಡಿಕಾರಿದ್ದಾರೆ.

ʼʼಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?ʼʼ ಎಂದು ಪ್ರಶ್ನೆ ಮಾಡಿದ್ದಾರೆ.

ʼʼಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆʼʼ ಎಂದು ಅವರು ಹೇಳಿದ್ಧಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News