ನೀಟ್ ಪರೀಕ್ಷೆ, ʼಒಂದು ದೇಶ - ಒಂದು ಚುನಾವಣೆʼ ವಿರುದ್ಧ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕಾರ

Update: 2024-07-25 13:22 GMT

ಬೆಂಗಳೂರು : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಕ್ಕೆ ದೇಶಾದ್ಯಂತ ನಡೆಯುವ ರಾಷ್ಟ್ರೀಯ ಅರ್ಹತ ಪ್ರವೇಶ ಪರೀಕ್ಷೆ(ನೀಟ್) ರದ್ದುಪಡಿಸಬೇಕು. ಒಂದು ರಾಷ್ಟ್ರ- ಒಂದು ಚುನಾವಣೆ ಜಾರಿ ಮಾಡಬಾರದು ಮತ್ತು ಕ್ಷೇತ್ರ ಪುನರ್ ವಿಂಗಡಣೆ 1971 ಜನಗಣತಿ ಆಧರಿಸಿಯೇ ನಿರ್ಧರಿಸಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸಲು ವಿಧಾನಮಂಡಲದ ಉಭಯ ಸದನಗಳಲ್ಲಿ ನಾಲ್ಕು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಗುರುವಾರ ಮೇಲ್ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭೆಯಲ್ಲಿ ಕಾನೂನು ಮತ್ತು ಸಂದೀಯ ವ್ಯವಹಾರ ಖಾತೆ ಸಚಿವ ಎಚ್.ಕೆ.ಪಾಟೀಲ್ ನಿರ್ಣಯ ಮಂಡಿಸಿದರು. ಈ ವೇಳೆ ವಿರೋಧ ಪಕ್ಷಗಳ ಸದಸ್ಯರು ಧರಣಿ ಮತ್ತು ಗದ್ದಲ ಮಧ್ಯೆಯೇ ಸರಕಾರ ನಿರ್ಣಯಗಳನ್ನು ಮಂಡಿಸಿದ ವೇಳೆ ಧ್ವನಿಮತದ ಒಪ್ಪಿಗೆ ದೊರೆಯಿತು. ಇನ್ನೂ, ಒಂದು ರಾಷ್ಟ್ರ ಮತ್ತು ಒಂದು ಚುನಾವಣೆ ಪ್ರಸ್ತಾವಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದರೆ, ಉಳಿದ ನಿರ್ಣಯಗಳಿಗೆ ವಿರೋಧ ವ್ಯಕ್ತಪಡಿಸಲು ಮುಂದಾಗಲಿಲ್ಲ.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಎಚ್.ಕೆ.ಪಾಟೀಲ್, ‘ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪ್ರಭುತ್ವವಾಗಿದ್ದು, ಸಂವಿಧಾನದ ಭಾಗ 7ರಲ್ಲಿ ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂದರು.

ಬೇರೆ ರಾಜ್ಯಗಳ ವಿಧಾನಸಭೆಗಳು ಅವುಗಳದೇ ಆದ ಅಧಿಕಾರ ಅವಧಿಯನ್ನು ಹೊಂದಿರುತ್ತವೆ ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆ ದುರ್ಬಲಗೊಳಿಸಬಹುದು ಎಂದು ಉಲ್ಲೇಖಿಸಿದರು.

ಅಲ್ಲದೆ, ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು, ಮತದಾರರ ಬೇಸರ ಕಡಿಮೆಗೊಂಡ ಸರಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡೆತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ. ಹಾಗಾಗಿ, ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಈ ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂದು ಕೇಂದ್ರ ಸರ್ಕಾರವನ್ನು ಈ ಸದನ ಆಗ್ರಹಿಸುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, ‘ಕೇಂದ್ರ ಸರಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಿ, ವರದಿ ಪಡೆದು ನಂತರ ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆ ರೂಪಿಸಲು ಮುಂದಾಗಿದೆ. ಬೇರೆ ಬೇರೆ ಸಮಯಗಳಲ್ಲಿ ಚುನಾವಣೆಗಳು ನಡೆಯುವುದರಿಂದ ನೀತಿ ಸಂಹಿತೆ ಎರಡು-ಮೂರು ತಿಂಗಳ ಕಾಲ ಜಾರಿಯಲ್ಲಿರಲಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಲಿದೆ ಎಂದು ತಿಳಿಸಿದರು.

ಏಕಕಾಲಿಕ ಚುನಾವಣೆ ವ್ಯವಸ್ಥೆಯಿಂದ ಸಮಯ, ಜನರ ತೆರಿಗೆಯ ಹಣ, ಮಾನವ ಸಂಪನ್ಮೂಲ ಉಳಿತಾಯವಾಗಲಿದೆ. ಜೊತೆಗೆ, ಅಭಿವೃದ್ಧಿ ಕಾರ್ಯಗಳಿಗೂ ಪೂರಕ ವಾತಾವರಣ ನಿರ್ಮಾಣವಾಗಲಿದೆ. ಸರ್ಕಾರದ ಈ ನಿರ್ಣಯವನ್ನು ನಾವು ವಿರೋಧಿಸುತ್ತೇವೆ, ಸರ್ವಾನುಮತದ ನಿರ್ಣಯ ಎಂಬುದಕ್ಕೆ ನಮ್ಮ ಸಹಮತ ಇಲ್ಲ ಎಂದು ಅವರು ನುಡಿದರು.

ಅಲ್ಲದೆ, ಈ ಮೂರು ನಿರ್ಣಯಗಳನ್ನು ಚರ್ಚಿಸಲು ಪ್ರತ್ಯೇಕ ಅಧಿವೇಶನಗಳನ್ನು ಕರೆಯಬೇಕು. ವಿರೋಧಪಕ್ಷಗಳು ಧರಣಿಯಲ್ಲಿ ಇರುವಾಗ ನಿರ್ಣಯ ಮಂಡಿಸುತ್ತಿರುವುದು ಸರಿಯಲ್ಲ. ಸದಸ್ಯರು ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಅವಕಾಶ ನೀಡಬೇಕಿತ್ತು. ಚರ್ಚೆಗೆ ನಾವು ಸಿದ್ಧರಿದ್ದೇವೆ. ಸರಕಾರಕ್ಕೆ ಚರ್ಚೆಯೇ ಬೇಕಿಲ್ಲ ಎಂದು ಟೀಕಿಸಿದರು.

ನೀಟ್ ರದ್ದು ಗೊಳಿಸಲು ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ್ ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ನಿರ್ಣಯವನ್ನು ಮಂಡಿಸಿ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತದೆ. ರಾಜ್ಯ ಸರಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು.

ಅದು ಅಲ್ಲದೆ, ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಸರ್ಕಾರ ನಡೆಸುವ ಸಾಮಾನ್ಯ ಪರೀಕ್ಷೆ ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಪಡಿಸುವುದು ಜೊತೆಗೆ ಕೇಂದ್ರ ಸರಕಾರವು ರಾಷ್ಟ್ರೀಯ ವೈದ್ಯಕೀಯ ಅಧಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿ ಮಾಡಬೇಕೆಂದು ಸದನ ಒತ್ತಾಯಿಸುತ್ತದೆ ಎಂಬ ನಿರ್ಣಯ ಮಂಡಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ಇನ್ನೊಂದೆಡೆ, ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನೀಟ್ ಪರೀಕ್ಷೆಯನ್ನು ರದ್ದು ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೆ ಮುಂದುವರಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಆನಂತರ ಇಲ್ಲಿಯೂ ಗದ್ದಲದ ನಡುವೆಯೇ ನಿರ್ಣಯವನ್ನು ಅಂಗೀಕರಿಸಲಾಯಿತು.

ಬಳಿಕ ನಾಲ್ಕನೆಯದಾಗಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವುದು ಮತ್ತು ಅರಣ್ಯ ಹಕ್ಕುಗಳ ಮಾನ್ಯತೆ 2006, 2007ರ ಕೇಂದ್ರ ಅಧಿನಿಯಮಗಳನ್ನು ಸೂಕ್ತವಾಗಿ ಮಾರ್ಪಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ಣಯ ಮಂಡಿಸಿ ಸದನದ ಅಂಗೀಕಾರ ಪಡೆದರು.

ಕ್ಷೇತ್ರ ಪುನರ್ ವಿಂಗಡಣೆ ನಿರ್ಣಯ: ಹೊಸ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ವಿರೋಧಿಸುವ ನಿರ್ಣಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಲ್ಮನೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಮಂಡಿಸಿದರು. ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ನಡುವೆಯೇ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಪ್ರಕಟಿಸಿದರು.

ಕರ್ನಾಟಕ ವಿಧಾನ ಸಭೆಯು, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನ ಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

‘ನೀಟ್‍ಗೆ ದಕ್ಷಿಣ ಭಾರತದ ರಾಜ್ಯಗಳ ವಿರೋಧವಿದೆ. ತಮಿಳುನಾಡಿನ ಸದನದಲ್ಲೂ ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಅದೇ ರೀತಿಯಲ್ಲಿ ತೆಲಂಗಾಣದಲ್ಲಿಯೂ ಇದೇ ಮಾದರಿ ಆಗಿದೆ. 24 ಲಕ್ಷ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಕೇಂದ್ರ ಸರಕಾರ ನೀಟ್ ಪರೀಕ್ಷೆ ಪಾರದರ್ಶಕವಾಗಿ ನಡೆಸಿಲ್ಲ’

-ಡಾ.ಶರಣ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News